ಮಾವು ಬೆಳೆಗಾರರಿಗೆ ನೆರವು: ರಾಜ್ಯ ಸರಕಾರದ ಮನವಿಗೆ ಕೇಂದ್ರ ಸಮ್ಮತಿ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರಕಾರ ಧಾವಿಸಿದೆ. ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರಕಾರದ ಮನವಿಗೆ ಕೇಂದ್ರ ಸರಕಾರವು ಸಕಾರಾತ್ಮಕ ಸಮ್ಮತಿ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರಡೆರೆಡು ರೂ.ಗಳಂತೆ ಒಟ್ಟು 4 ರೂ.ವ್ಯತ್ಯಾಸ ಹಣ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ. ಶನಿವಾರ ರಾಜ್ಯದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವು ಬೆಳೆಗೆ ಪಿಡಿಪಿಎಸ್ ಯೋಜನೆಯ ಅನುಷ್ಠಾನಕ್ಕೆ ಚಲುವರಾಯಸ್ವಾಮಿ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಮ್ಮತಿ ನೀಡಿದರು. 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ.
ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಮಾವು ಬೆಳೆಯ ಪರಿಸ್ಥಿತಿ: 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಈ ಬಾರಿ ಅಂದಾಜು 8 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ. ಪ್ರಸಕ್ತ ಸಾಲಿನ ಮೇ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‍ಗೆ 1,200 ರೂ.ಗಳಿಂದ 2,500 ರೂ.ವರೆಗೆ ಇತ್ತು ಎಂದು ಅವರು ಕೇಂದ್ರ ಸಚಿವರ ಗಮನ ಸೆಳೆದರು.
ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.