×
Ad

ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಸುವಂತೆ ಸುತ್ತೋಲೆ

Update: 2025-06-25 19:08 IST

ಬೆಂಗಳೂರು : ಎಲ್ಲ ಇಲಾಖೆಗಳ ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸಬೇಕು. ಇಲ್ಲವಾದಲ್ಲಿ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಎಚ್ಚರಿಸಿದ್ದಾರೆ.

ಬುಧವಾರ ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಬೇಕು. ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ, ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡವಳಿಗಳನ್ನು ಕನ್ನಡದಲ್ಲಿ ತಯಾರಿಸಿ, ಸರಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು. ಕೇಂದ್ರ ಸರಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ಅವರು ಹೇಳಿದ್ದಾರೆ.

ಸರಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸದಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಇರದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸ್ಪಷ್ಟನೆ ಪಡೆಯಲು ನಿರ್ದೇಶನ ನೀಡಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ, ನೌಕರರ ಕರ್ತವ್ಯವಾಗಿದೆ. ಆದ್ದರಿಂದ ಈಗಾಗಲೇ ಹೊರಡಿಸಿರುವ ಸರಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರಕಾರ, ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳ, ವಿಶ್ವವಿದ್ಯಾಲಯಗಳು, ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ-ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಬಳಕೆ ಅಭಿನಂದನಾರ್ಹ: ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವಂತೆ ಎಲ್ಲ ಇಲಾಖೆಯ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ನಡೆ ಅಭಿನಂದನಾರ್ಹ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಬುಧವಾರ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆಯನ್ನು ನೀಡದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ನೀಡಿರುವ ಎಚ್ಚರಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News