ಶಾಸಕರೊಂದಿಗೆ ಮೂರನೇ ದಿನವು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿನ ಅಭಿವೃದ್ಧಿ ಕಾಮಗಾರಿಗಳು, ಬಜೆಟ್ ಘೋಷಣೆಗಳ ಅನುಷ್ಠಾನ, ಗ್ಯಾರಂಟಿಗಳಿಂದ ಜನರ ಬದುಕಿನ ಮೇಲೆ ಆಗಿರುವ ಪರಿಣಾಮ, ಕೃಷಿ ಚಟುವಟಿಕೆಗಳು, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಶಾಸಕರು ಹಾಗೂ ಸಚಿವರೊಂದಿಗೆ ಮೂರನೆ ದಿನವು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.
ಗುರುವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಅವರು ಸಭೆ ನಡೆಸಿದರು.
ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಸಚಿವರು, ಶಾಸಕರೊಂದಿಗೆ ಸ್ಥಳೀಯವಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಕ್ಷೇತ್ರದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆಯೂ ಚರ್ಚೆ ನಡೆಸಿದರು.
ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆಯೂ ಚರ್ಚೆ ನಡೆಸಿದ ಮುಖ್ಯಮಂತ್ರಿ, ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿಗತಿ, ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆಯೂ ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.