ನಮ್ಮ ಪಕ್ಷದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ನಮ್ಮ ಪಕ್ಷದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ದಿಲ್ಲಿಯಿಂದ ತಮಿಳುನಾಡಿನ ಗೂಡ್ಲೂರಿಗೆ ತೆರಳಲು ವಿಶೇಷ ವಿಮಾನದಲ್ಲಿ ಮಾರ್ಗ ಮಧ್ಯೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ, ಅವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದಿಲ್ಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.
ನಮ್ಮ ಪಕ್ಷದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ, ಅದೆಲ್ಲಾ ಟಿವಿ, ಪೇಪರ್ ನಲ್ಲಿ ಮಾತ್ರ ಬರುತ್ತಿರುವುದು. ಇದೆಲ್ಲಾ ಮಾಧ್ಯಮಗಳ ಸೃಷ್ಟಿ, ಹೈಕಮಾಂಡ್ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ. ಶಾಸಕರಿಗೆ ಪಾಪ ಹೈಕಮಾಂಡ್ ವಿಚಾರ ಗೊತ್ತಿರುವುದಿಲ್ಲ. ಹಾಗಾಗಿ ಕೆಲವು ಶಾಸಕರು ಹೇಳಿಕೆ ಕೊಡುತ್ತಿದ್ದಾರೆ. ನಾನು ಅಥವಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಬೇಕು ಎಂದು ಹೇಳಿದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ:
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬೆಂಗಳೂರು ಮಾತ್ರವಲ್ಲ, ಜಿ.ಪಂ., ತಾ.ಪಂ. ಚುನಾವಣೆಗಳನ್ನೂ ನಡೆಸಲಾಗುವುದು. ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈಗ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು, ನಾವು ಗಮನಿಸುವುದಿಲ್ಲ ಎಂದರು.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್:
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.