ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Update: 2026-07-17 12:42 IST

ಸತೀಶ್ ಜಾರಕಿಹೊಳಿ

ನವದೆಹಲಿ : ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಗೊಂದಲ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವೆ ಗೊಂದಲ ಸೃಷ್ಟಿಸಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ. ಅದರಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಅವರದ್ದಾಗಿದೆ. ಆದರೆ ಇಂತಹ ಪ್ರಯತ್ನಗಳು ಹೆಚ್ಚು ದಿನ ನಡೆಯುವುದಿಲ್ಲ ಎಂದು ಹೇಳಿದರು.

ನಮ್ಮದು ಸುಮಾರು 30 ವರ್ಷಗಳ ರಾಜಕೀಯ ಹಾಗೂ ವೈಯಕ್ತಿಕ ಸಂಬಂಧ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಇಲ್ಲ. ನಾನು ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನೇ ಬಳಸಿರಲಿಲ್ಲ. ಅದನ್ನು ನೀವು ಮಾಧ್ಯಮದವರು ಸೇರಿಸಿದ್ದೀರಿ ಎಂದು ಅವರು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್‌ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ. ಈ ಸಂಬಂಧ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿಸಲಾಗಿದ್ದು, ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆಯಿದೆ. ಹೊಸ ಮುಖಗಳಿಗೆ ಅವಕಾಶ ನೀಡುವುದು ಪಕ್ಷದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಅವರು ಮುಂದಿನ ದಿನಗಳಲ್ಲಿ ಪಕ್ಷದ ಆಸ್ತಿಯಾಗಲಿದ್ದಾರೆ. ಜೊತೆಗೆ ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮತ್ತೊಂದು ಸ್ಥಾನ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News