ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ: ಎಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯ ಸರಕಾರ ಪ್ರತೀ ವಿಷಯಕ್ಕೂ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಈ ನಡೆಯಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ಬುಧವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರಕಾರದಲ್ಲಿ ಡಾ.ಮನಮೋಹನ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್ ಸಿಂಗ್, ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್, ನಬಾರ್ಡ್ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ ಎಂದು ಆರೋಪಿಸಿದರು.
ಈಗ ನೋಡಿದರೆ ರಾಜ್ಯ ಸರಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು ಎಂದರು.
ಸಮಾವೇಶ: ಜ.30ರಂದು ಸಂಸತ್‍ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜ.23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರಕಾರದ ವೈಫಲ್ಯಗಳು, ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎನ್.ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಮುಖಂಡ ರೋಷನ್ ಅಬ್ಬಾಸ್ ಸೇರಿದಂತೆ ಪ್ರಮುಖರಿದ್ದರು.
ಗಾಂಧೀಜಿ ಮೇಲೆ ಕಾಂಗ್ರೆಸ್ ಅಕ್ಕರೆ ಬಗ್ಗೆ ಗೊತ್ತಿದೆ!
ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಮಹಾತ್ಮ ಗಾಂಧೀಜಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಎಚ್.ಟಿ.ದೇವೇಗೌಡ ಟೀಕಿಸಿದ್ದಾರೆ.