ಸಹಯೋಗ್ ಪೋರ್ಟಲ್‌ಗೆ ಆಕ್ಷೇಪ; ಎಕ್ಸ್ ಕಾರ್ಪ್ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ 'ಸಹಯೋಗ್' ಪೋರ್ಟಲ್ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್ ಕಾರ್ಪ್ (ಟ್ವಿಟರ್) ಸಲ್ಲಿಸಿರುವ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(3)(ಬಿ) ವ್ಯಾಪ್ತಿಯನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿ ಸೆಪ್ಟೆಂಬರ್ 24ರಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ರದ್ದುಕೋರಿ ಎಕ್ಸ್ ಕಾರ್ಪ್ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಮೇಲ್ಮನವಿದಾರರ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳಾದ 69ಎ ಮತ್ತು 79 ಅನ್ನು ಪ್ರಶ್ನಿಸಲಾಗಿದೆ. ಸೆಕ್ಷನ್ 79 ಅಧಿಕಾರದ ಮೂಲವಲ್ಲ. 69ಎ ಮತ್ತು 79 ಎರಡನ್ನೂ ಒಟ್ಟಿಗೆ ಓದಬೇಕು. ಸೆಕ್ಷನ್ 79 ಅಧಿಕಾರ ಹೊಂದಿರುವ ನಿಬಂಧನೆಯಲ್ಲ ಎಂದರು.
ವಾದ ಆಲಿಸಿದ ನ್ಯಾಯಪೀಠ, ಈ ವಿಚಾರವನ್ನು ಪರಿಶೀಲಿಸಬೇಕಿದ್ದು, ಎಷ್ಟು ಸಮಯಬೇಕಾಗುತ್ತದೆ. ಈ ಪ್ರಕರಣಕ್ಕೆ ಎಷ್ಟು ಸಮಯ ನಿಗದಿಪಡಿಸಬೇಕು? ಎಂದು ಕೇಂದ್ರ ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಒಂದು ತಿಂಗಳು ಸಮಯಬೇಕು. ಈ ಪ್ರಕರಣದಲ್ಲಿ ಸಾಲಿಸಿಟರ್ ಜನರಲ್ ವಾದ ಮಂಡಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಮೇಲ್ಮನವಿಯಲ್ಲಿ ಪ್ರತಿವಾದಿಗಳಾದ ಕಾನೂನು ಮತ್ತು ನ್ಯಾಯ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಹಣಕಾಸು ಸಚಿವಾಲಯ, ರಕ್ಷಣಾ ಸಚಿವಾಲಯ, ರೈಲ್ವೇ ಸಚಿವಾಲಯ, ಭಾರಿ ಕೈಗಾರಿಕಾ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 11ಕ್ಕೆ ಮುಂದೂಡಿತು.