×
Ad

ಬಿಎಂಟಿಸಿ ಚಾಲಕನಿಗೆ ಚಪ್ಪಲಿಯಿಂದ ಮಹಿಳೆ ಹಲ್ಲೆಗೈದ ಪ್ರಕರಣ: ಕಠಿಣ ಕ್ರಮಕ್ಕೆ ಗೃಹಸಚಿವ, ಪೊಲೀಸ್ ಆಯುಕ್ತರಿಗೆ ರಾಮಲಿಂಗಾರೆಡ್ಡಿ ಪತ್ರ

Update: 2025-06-15 11:54 IST

ವಿಷಯ: BMTC ಸಿಬ್ಬಂದಿ ಮೇಲೆ ಪದೇಪದೆ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಸಾರಿಗೆ ಸಚಿವರು, ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಾನು  ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿರುತ್ತೇನೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು  ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

BMTC, KSRTC ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ತಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News