×
Ad

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲಬೇಕೆಂಬುವುದು ನಮ್ಮ ಪಕ್ಷದ ಗುರಿ: ಬಿ.ವೈ. ವಿಜಯೇಂದ್ರ

Update: 2023-11-15 12:28 IST

Photo: screenshot/youtube

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲಬೇಕೆಂಬುವುದು ನಮ್ಮ ಪಕ್ಷದ ಗುರಿಯಾಗಿದೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ನಿಜ. ಆದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಉತ್ತರ ಕೊಡಬೇಕಾಗಿದೆ. ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆಯನ್ನೂ ನಾವು ಮರೆಯಬಾರದು. ಲೋಕಸಭಾ ಚುನಾವಣೆ ಅಂತ ಭಯ ಬೇಡ. ನಾವೇನೂ ಆಪರೇಷನ್ ಕಮಲ ಮಾಡುವುದಿಲ್ಲ ಎಂದರು.

ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ರಾಜ್ಯದಲ್ಲಿ ಹೊಸ ಸರಕಾರ ಬಂದಿದೆ. ಶೇ 40 ಸರಕಾರ ಎಂದು ನಮ್ಮ ಪಕ್ಷವನ್ನು ಟೀಕಿಸಿದ್ದರು. ಮತದಾರರೂ ಅದನ್ನು ನಂಬಿದರು. ಇದೀಗ ಹೊಸ ಕಾಂಗ್ರೆಸ್ ಸರಕಾರ ಬಂದು 6 ತಿಂಗಳಾಗಿದೆ. ಹಗಲುದರೋಡೆ, ಭ್ರಷ್ಟಾಚಾರ ಮೇರೆ ಮೀರಿದೆ. ಶೇ 40 ಕಮಿಷನ್, ಭ್ರಷ್ಟಾಚಾರದ ಅನುಷ್ಠಾನ ಕಾಂಗ್ರೆಸ್ ಸರಕಾರದಿಂದ ಆಗುತ್ತಿದೆ ಎಂದು ಆಕ್ಷೇಪಿಸಿದರು.

ಜೆಪಿ ನಡ್ಡಾ ಅವರು ನನ್ನ ಹೆಸರನ್ನು ಘೋಷಿಸಿದ ಬಳಿಕ ಎಲ್ಲಾ ಹಿರಿಯ ನಾಯಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೇನೆ. ಪಕ್ಷದ ಎಲ್ಲ ಹಿರಿಯರು ನನಗೆ ಬೆನ್ನು ತಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುವ ಜೊತೆಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೂಡ ರಾಜ್ಯವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಲು ಶ್ರಮಿಸುತ್ತೇನೆ. ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ, ಸಂಘ ಪರಿವಾರದ ಮಾರ್ಗದರ್ಶನದಡಿ ಬಿಜೆಪಿಗೆ ಶಕ್ತಿ ತುಂಬುತ್ತೇನೆ. ಹಗಲು ರಾತ್ರಿ ಪ್ರವಾಸ ಮಾಡಿ, ರೈತರು, ಬಡವರ ಪರವಾಗಿ ಧ್ವನಿ ಎತ್ತುವೆ. ಭ್ರಷ್ಟ ಸರಕಾರದ ವಿರುದ್ಧ ಹೋರಾಟ ಮಾಡುತ್ತೇನೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.

ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯು ಅತ್ಯಂತ ಮಹತ್ವದ್ದು, ನನಗಿತ್ತ ಸ್ಥಾನದ ಮಹತ್ವ ನನಗೆ ಗೊತ್ತಿದೆ. ಯಡಿಯೂರಪ್ಪ ಅವರ ಹೋರಾಟ, ಸಾಮಾನ್ಯ ಕಾರ್ಯಕರ್ತರಿಗೆ ಗೌರವ ಕೊಡುವ ಪ್ರವೃತ್ತಿ ನನಗೆ ತಿಳಿದಿದೆ. ಕಾರ್ಯಕರ್ತರು ತಲೆ ತಗ್ಗಿಸುವ ಸಂದರ್ಭ ಸೃಷ್ಟಿಸಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮಾಜಿ ಸಚಿವರು, ಮಾಜಿ ಹಾಲಿ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಭಾಗವಹಿಸಿದ್ದರು. ಬಳಿಕ ಎಲ್ಲ ಪ್ರಮುಖರು ವಿಜಯೇಂದ್ರ ಅವರನ್ನು ಅಭಿನಂದಿಸಿದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News