ಶರಾವತಿ ಜಲವಿದ್ಯುತ್ ಯೋಜನೆ ಪ್ರಶ್ನಿಸಿದ ಪಿಐಎಲ್; ಅರಣ್ಯ ಪ್ರದೇಶದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸಾವಿರ ಕೋಟಿ ರೂ. ವೆಚ್ಚದ ಉದ್ದೇಶಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ' ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜಲವಿದ್ಯುತ್ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ನೀಡಿರುವ ಅನುಮೋದನೆ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ನೀಡಿರುವ ತಾತ್ವಿಕ ಅನುಮೋದನೆ ಪ್ರಶ್ನಿಸಿ ಸಾಗರದ ಅಖಿಲೇಶ್ ಚಿಪ್ಲಿ, ಉಡುಪಿಯ ಡಾ. ರವೀಂದ್ರನಾಥ ಶಾನಭಾಗ್ ಹಾಗೂ ಶಿವಮೊಗ್ಗದ ಸಿ.ಬಿ. ಮನೋಹರ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ ಸಂಬಂಧ ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಇದರಿಂದ, ಅರಣ್ಯ ಹಾಗೂ ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ಯೋಜನೆಯ ಕಾಮಗಾರಿಗೆ ತಡೆ ನೀಡಬೇಕು ಎಂದು ಕೋರಿದರು.
ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್ ಅವರು, ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ದೊರೆತಿಲ್ಲ. ಯೋಜನೆ ಬಗೆಗಿನ ಆತಂಕಗಳ ಪರಿಶೀಲಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಯೋಜನೆಯಿಂದ ಅರಣ್ಯ ಹಾಗೂ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಆತಂಕವಿದ್ದು, ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಆದ್ದರಿಂದ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ ಏನು?
ಉದ್ದೇಶಿತ ಯೋಜನೆಗೆ ಒಟ್ಟು 142.763 ಹೆಕ್ಟೇರ್ ಭೂಮಿಯ ಅಗತ್ಯವಿದ್ದು, ಅದರಲ್ಲಿ 102 ಹೆಕ್ಟೇರ್ ಪ್ರದೇಶವು ಭೌಗೋಳಿಕವಾಗಿ ಅಭಯಾರಣ್ಯದೊಳಗೆ ಮತ್ತು 39.715 ಹೆಕ್ಟೇರ್ ಪರಿಸರ ಸೂಕ್ಷ್ಮ ವಲಯದಲ್ಲಿ ಇದೆ. ಇಂತಹ ಬೃಹತ್ ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದೊಳಗೆ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ ನೀಡುವುದರಿಂದ ಬೃಹತ್ ಕಂಬಗಳನ್ನು ನೆಡುವುದು, ಕಂಬಗಳ ನಡುವೆ ಹೆಚ್ಚಿನ ವೋಲ್ಟೇಜ್ ತಂತಿಗಳನ್ನು ಎಳೆಯುವುದೂ ಸೇರಿದಂತೆ ಉತ್ಪಾದಿಸುವ ಜಲವಿದ್ಯುತ್ ರವಾನಿಸಲು ಪ್ರಸರಣ ಮಾರ್ಗಗಳ ನಿರ್ಮಾಣದಿಂದ ಅಮೂಲ್ಯ ವೃಕ್ಷ ಸಂಪತ್ತು ನಾಶವಾಗುವ ಜತೆಗೆ, ವನ್ಯಜೀವಿಗಳ ಆವಾಸಸ್ಥಾನಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ವನ್ಯಜೀವಿ ರಕ್ಷಣಾ ಕಾಯ್ದೆ–1972ರ ಸೆಕ್ಷನ್ 29ರ ಅಡಿಯಲ್ಲಿ ವಿಧಿಸಲಾದ ನಿರ್ಬಂಧವನ್ನು ಗಮನದಲ್ಲಿ ಇರಿಸಿಕೊಂಡು ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ ಯೋಜನೆಗೆ ಯಾವುದೇ ಅನುಮೋದನೆ ನೀಡದಂತೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.