×
Ad

ಪೋಕ್ಸೋ ಪ್ರಕರಣ | ಬಿ.ಎಸ್.ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ

Update: 2024-06-27 21:21 IST

ಬೆಂಗಳೂರು : ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸಿಐಡಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಪ್ರಕರಣ ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಯಡಿಯೂರಪ್ಪ ವಿರುದ್ಧ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ತಿಳಿಸಿದ್ದಾರೆ.

ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೋ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿ.ಎಸ್.ಯಡಿಯೂರಪ್ಪ ಅವರು ಹಳೇ ಪ್ರಕರಣದ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಮತ್ತು ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ಹೇಳಿವೆ.

ಒಂದನೇ ತ್ವರಿತಗತಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ್, ಎಂ.ರುದ್ರೇಶ್ ಹಾಗೂ ಜಿ.ಮರಿಸ್ವಾಮಿ ಅವರನ್ನು ಆರೋಪಿತರನ್ನಾಗಿ ಮಾಡಿದ್ದಾರೆ. ಸುಮಾರು 750 ಪುಟಗಳಿರುವ ಚಾರ್ಜ್‍ಶೀಟ್ ಇದಾಗಿದ್ದು, 75 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News