ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್; ಕಠಿಣ ಕ್ರಮದ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಸೆ.1: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನು ಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಎಚ್ಚರಿಕೆ ನೀಡಿದೆ.
ಈ ಸಂಬಂಧ ಸೋಮವಾರ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನು ಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ ಮಾಡುವ ಮೂಲಕ ಸಾರ್ವಜನಿಕ ಶಾಂತಿ ಭಂಗ, ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಯಾವುದೇ ಬಳಕೆದಾರರಿಂದ ಅಂಥಹ ಚಟುವಟಿಕೆಗಳು ಪುನರಾವರ್ತನೆಯಾದರೆ ಕಠಿಣ ಕ್ರಮಕ್ಕೆ ದಾರಿಯಾಗಬಹುದು. ಜಾಗರೂಕರಾಗಿರಿ ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಕರ್ನಾಟಕ ರಾಜ್ಯ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ.