ʼಗ್ಯಾರಂಟಿʼ ಕಾರ್ಡ್ ಹಂಚಿಕೆ ಮಾಡಿ ಚುನಾವಣೆ ಅಕ್ರಮ ವಿಚಾರ | ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ರಿಲೀಫ್
ಬೆಂಗಳೂರು : ಗ್ಯಾರಂಟಿ ಕಾರ್ಡ್‌ಗಳನ್ನು ಹಂಚುವ ಮೂಲಕ ಚುನಾವಣಾ ಅಕ್ರಮ ಎಸಗಿದ ಆರೋಪದಲ್ಲಿ ದಾವಣಗೆರೆಯ ಕಾಂಗ್ರೆಸ್ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಪ್ರಶಾಂತ್ ಎಫ್. ಗೌಡರ್ ವಾದ ಮಂಡಿಸಿದ್ದರು.
‘ಗ್ಯಾರಂಟಿ ಯೋಜನೆಗಳು ಕಾಂಗ್ರೆೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದ್ದು, ಚುನಾವಣಾ ಪ್ರಣಾಳಿಕೆಯು ಪಕ್ಷದ ನೀತಿ ನಿರ್ಣವಾಗಿದ್ದು, ಅದನ್ನು ಪ್ರತ್ಯೇಕವಾಗಿ ಅಭ್ಯರ್ಥಿಗೆ ಸಂಬಂಧಿಸಿರುವುದಿಲ್ಲ. ಮುಖ್ಯವಾಗಿ ಮತದಾರರನ್ನು ಸೆಳೆಯಲು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗುವ ಭರವಸೆ ಅಥವಾ ಘೋಷಣೆಗಳನ್ನು ಪ್ರಜಾಪ್ರತಿನಿಧಿ ಕಾಯ್ದೆ-1951ಎ ಸೆಕ್ಷನ್ 123 (1) ಎ)(ಬಿ) ಅಡಿ ಚುನಾವಣಾ ಅಕ್ರಮಗಳೆಂದು ಹೇಳಲಾಗದು’ ಎಂದು ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಸಲ್ಲಿಸಲಾಗಿದ್ದ ಇಂತಹದ್ದೇ ಅರ್ಜಿಯಲ್ಲಿ ನೀಡಲಾಗಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಾಲಯ ಪ್ರಭಾ ಮಲ್ಲಿಕಾರ್ಜುನ್ ಅವರ ವಿರುದ್ಧದ ಅರ್ಜಿಯನ್ನು ತಿರಸ್ಕರಿಸಿದೆ.
ಪ್ರಭಾ ಮಲ್ಲಿಕಾರ್ಜುನ್ ಅವರು ಗ್ಯಾಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿರುವುದೇ ಅಲ್ಲದೆ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದ್ದು, ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದರು.