ಎಚ್.ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ: ಶಿವರಾಜ ತಂಗಡಗಿ
ಎಚ್.ದಂಡಪ್ಪ
ಬೆಂಗಳೂರು: 2026ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ, ವಿಮರ್ಶಕ ಎಚ್.ದಂಡಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಮಂಗಳವಾರ ಪ್ರಕಟಣೆ ನೀಡಿರುವ ಅವರು, ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಶೈಲಿಯ ಬರವಣಿಗೆಗೆ ಹೆಸರಾದ ಎಚ್.ದಂಡಪ್ಪ ಅವರು ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆ ಎರಡರಲ್ಲೂ ತೊಡಗಿಸಿ ಕೊಂಡವರು, ಅನೇಕ ಪ್ರತಿಷ್ಠಿತ ಗೌರವ, ಸನ್ಮಾನಗಳಿಗೆ ಪಾತ್ರರಾಗಿರುವ ಎಚ್.ದಂಡಪ್ಪ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಅವರ ನೇತೃತ್ವದ ಆಯ್ಕೆ ಸಮಿತಿ ಎಚ್.ದಂಡಪ್ಪ ಅವರನ್ನು ಆಯ್ಕೆ ಮಾಡಿದೆ ಎಂದು ತಿಳಿಸಿದ್ದಾರೆ.
ಕನಕಶ್ರೀ ಪ್ರಶಸ್ತಿಯು 5 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ನ.27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿರುವ ಸಂತಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.