ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ, ಅವರಪ್ಪನೇ ಆಗಲಿ ಕಾನೂನು ಎಲ್ಲರಿಗೂ ಒಂದೇ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ಪಥ ಸಂಚಲನ ಮಾಡಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ, ಅವರಪ್ಪನೇ ಆಗಲಿ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಇವರು ಯಾರು ಕಾನೂನಿಗಿಂತ ದೊಡ್ಡವರಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಲಡ್ಕ ಪ್ರಭಾಕರ್ ಭಟ್ ಯಾರು? ನ್ಯಾಯಾಲಯಕ್ಕಿಂತ ಅವರು ದೊಡ್ಡವರಾ?. ನ್ಯಾಯಾಲಯ ಅನುಮತಿ ದೊರೆಯದೆ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನ ಮಾಡುತ್ತಾರಾ?. ಅನುಮತಿ ಇಲ್ಲದೇ ಮಾಡಿದರೆ ರಾಜ್ಯ ಸರಕಾರ ಏನು ಕತ್ತೆ ಕಾಯುತ್ತಿಲ್ಲ, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಶಾಖೆಗಳಲ್ಲಿ ಮಾತನಾಡಿದಂತೆ ಸಾರ್ವಜನಿಕವಾಗಿ ವಿವಾದಿತ, ಕೋಮು ಸೌಹಾರ್ದತೆ ಹಾಳು ಮಾಡುವಂತೆ ಮಾತನಾಡಿದರೆ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಯಾರೇ ಆಗಿದ್ದರೂ ಸರಕಾರ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರಕಾರ ಜಾರಿಗೊಳಿಸಿರುವ ಕಾನೂನು ಅನ್ನು ಎಲ್ಲರೂ ಪಾಲನೆ ಮಾಡಬೇಕು. ಇದು ಸಮಾಜದ ಹಿತಕ್ಕೆ ತಂದಿರುವ ಆದೇಶ ಆಗಿದೆ ಎಂದು ಪ್ರಿಯಾಂಕ್ ಖರ್ಗೆ ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ ಪ್ರಚೋದಿಸುವ ಮತ್ತು ಮಹಿಳೆಯರ ಘನತೆಗೆ ಧಕ್ಕೆಯನ್ನು ಉಂಟು ಮಾಡುವ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.