ಕರ್ನಾಟಕ ಕಾಂಗ್ರೆಸ್ ನ ಭರವಸೆಯ ನಾಯಕ ಪ್ರಿಯಾಂಕ್ ಖರ್ಗೆಗೆ ಮತ್ತೆ ಸಚಿವ ಸ್ಥಾನ
ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕಲ್ಯಾಣ ಕರ್ನಾಟಕದ ಪ್ರಭಾವಿ ನಾಯಕ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಪುತ್ರರಾಗಿರುವ ಪ್ರಿಯಾಂಕ್ ಖರ್ಗೆ ಅವರು, 1978 ರ ನವೆಂಬರ್ 22 ರಂದು ಜನಿಸಿದ್ದಾರೆ. ಪ್ರಿಯಾಂಕ್ ಅವರು ತಮ್ಮ 20ರ ಹರೆಯದಲ್ಲೇ 1998ರಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಕಾರ್ಯಕರ್ತರಾಗಿ ರಾಜಕೀಯಕ್ಕೆ ಕಾಲಿಟ್ಟರು. ಕಾಲೇಜು ದಿನಗಳಲ್ಲಿಯೇ ನಾಯಕತ್ವದ ಗುಣಗಳನ್ನು ಪ್ರದರ್ಶಿಸಿದ ಅವರು, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ನಂತರ ಯುವ ಕಾಂಗ್ರೆಸ್‌ನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು.
2009ರ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ವಾಲ್ಮೀಕಿ ನಾಯಕ್ ವಿರುದ್ಧ ಸೋಲು ಕಂಡರು. ಆದರೆ, 2013ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿಗೆ ಅವರು ಶಾಸಕರಾದರು. ನಂತರ 2018 ಹಾಗೂ 2023ರ ಚುನಾವಣೆಗಳಲ್ಲೂ ನಿರಂತರವಾಗಿ ಜಯ ಸಾಧಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಮತ್ತಷ್ಟು ಗಟ್ಟಿಗೊಳಿಸಿದರು.
ಶಾಸಕರಾದ ಕೆಲವೇ ವರ್ಷಗಳಲ್ಲಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರಕಾರದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆಯ ಜವಾಬ್ದಾರಿ ನೀಡಿದರು.
ನಂತರ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿರು.
2023ರಲ್ಲಿ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಜೊತೆಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಜವಾಬ್ದಾರಿಯೂ ದೊರೆಯಿತು. ಬೆಂಗಳೂರು ಟೆಕ್ ಸಮಿಟ್‌ಗಳಂತಹ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಯಲ್ಲಿಯೂ ಅವರ ಪಾತ್ರ ಮಹತ್ವದ್ದಾಗಿದೆ.