×
Ad

ರಾಹುಲ್ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು

Update: 2023-07-14 23:15 IST

ಬೆಂಗಳೂರು, ಜು.14: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಈ.ಡಿ) ವಿಚಾರಣೆಗೆ ಒಳಪಡಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಈ.ಡಿ ರಾಹುಲ್‍ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022ರ ಜೂ.16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಡಿಕೆಶಿ ಭಾಗವಹಿಸಿ ಪ್ರತಿಭಟನೆ ನಡೆಸಿದ್ದರು.

ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಿಯಮ ಪ್ರಕಾರ ಈ ಆದೇಶ ಉಲ್ಲಂಘನೆಯಾದರೆ, ಆ ಕುರಿತು ನಗರ ಪೊಲೀಸ್ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್‍ಗೆ ಖಾಸಗಿ ದೂರು ಸಲ್ಲಿಸಬೇಕು.

ಆದರೆ, ಅವರಿಗಿಂತ ಕಡಿಮೆ ಶ್ರೇಣಿಯ ಅಧಿಕಾರಿಯಾದ ಸಬ್ ಇನ್ಸ್‍ಪೆಕ್ಟರ್ ಖಾಸಗಿ ದೂರು ಸಲ್ಲಿಸಿದ್ದಾರೆ. ಹೀಗಿದ್ದರೂ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇರ್ಟ್ ನ್ಯಾಯಾಲಯವು ಸಂಜ್ಞೇಯ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿದ್ದು, ಆ ಮೂಲಕ ಕಾನೂನು ಲೋಪ ಎಸಗಿದೆ. ಹೀಗಾಗಿ, ಅರ್ಜಿದಾರರ ವಿರುದ್ಧದ ಖಾಸಗಿ ದೂರು ರದ್ದುಪಡಿಸಲು ಅರ್ಹವಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರವೇ ಪ್ರತಿಭಟನೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಆದರೆ, ಡಿಕೆಶಿ ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಶಿವಾಜಿನಗರ ಠಾಣೆ ಸಬ್‍ಇನ್ಸ್‍ಪೆಕ್ಟರ್ 2022ರ ಜೂ.16ರಂದು ಖಾಸಗಿ ದೂರು ದಾಖಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News