×
Ad

ಕಾಂಗ್ರೆಸ್ ಸರಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ : ಆರ್.ಅಶೋಕ್

Update: 2025-10-27 20:44 IST

ಬೆಂಗಳೂರು: ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ನೀಡಲು ಈ ಕಾಂಗ್ರೆಸ್ ಸರಕಾರದಲ್ಲಿ ದುಡ್ಡಿಲ್ಲ. ಇನ್ನೂ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು 4-5 ಸಾವಿರ ಕೋಟಿ ರೂ.ಗಳನ್ನು ಎಲ್ಲಿಂದ ತರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಸ್ತೆಗಳ ಮೇಲೆ ಒಂದು ಪದರ(ಲೇಯರ್) ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಕೇಳಿದರು.

ರಸ್ತೆ ಗುಂಡಿಯಿಂದಾಗಿ ಸುಮಾರು ಹನ್ನೆರಡು ಜನ ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಲಿಂಗ್ ಗ್ಲಾಸ್ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರಕಾರ ತಿಳಿಸಿದರೆ, ಗಿನ್ನೆಸ್ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯವಾಡಿದ ಅವರು, ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್ ಆಗುತ್ತಿಲ್ಲ. ಆದುದರಿಂದ, ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಮುಂದೆ ನಾವು ರದ್ದು ಮಾಡುತ್ತೇವೆ ಎಂದರು.

ಸುರಂಗ ರಸ್ತೆ ಅಸಾಧ್ಯ: ನಗರದ ಶ್ವಾಸಕೋಶದಂತಿರುವ ಲಾಲ್‍ಬಾಗ್‍ನಲ್ಲಿ ಐದಾರು ಎಕರೆ ಪಡೆದು ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ನಗರಕ್ಕೆ ಹಸಿರು ನೀಡುವ ಇಂತಹ ಉದ್ಯಾನದಲ್ಲಿ ಸುರಂಗ ಕೊರೆಯಬಾರದು. ಈ ಯೋಜನೆಯಿಂದ ಅಂತರ್ಜಲಕ್ಕೆ ಧಕ್ಕೆಯಾಗುತ್ತದೆ ಎಂದು ಅಶೋಕ್ ತಿಳಿಸಿದರು.

ಕೆಂಪೇಗೌಡ ಗೋಪುರ ಲಾಲ್‍ಬಾಗ್‍ನಲ್ಲಿದ್ದು, ಅದನ್ನೂ ಸರಕಾರ ಒಡೆದು ಹಾಕಬಹುದು. ವಿಜ್ಞಾನಿಗಳು, ಪರಿಸರವಾದಿಗಳು ಏನು ಹೇಳಿದ್ದಾರೆ ಎಂದು ಸರಕಾರ ನೋಡಬೇಕಿದೆ. ಎತ್ತಿನಹೊಳೆ ಯೋಜನೆಯೆ ಇನ್ನೂ ಅನುಷ್ಠಾನವಾಗಿಲ್ಲ. ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ ಎಂದು ಅವರು ಭವಿಷ್ಯ ನುಡಿದರು.

ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಪಾಲಿಗೆ ಖಳನಾಯಕ ಆಗುವುದು ಬೇಡ. ಸುರಂಗ ರಸ್ತೆ ವಿರುದ್ಧ ಬೆಂಗಳೂರಿನ ಬಿಜೆಪಿ ಶಾಸಕರೊಂದಿಗೆ ಸೇರಿ ಹೋರಾಟ ಮಾಡಲಾಗುವುದು ಎಂದು ಅಶೋಕ್ ಎಚ್ಚರಿಕೆ ನೀಡಿದರು.

ಮಳೆಯಿಂದಾಗಿ ಬೆಳೆ ಹಾನಿ ಪರಿಹಾರವನ್ನು ಇನ್ನೂ ಕೊಟ್ಟಿಲ್ಲ. ಜೊತೆಗೆ ಸೋಯಾ, ಸೂರ್ಯಕಾಂತಿ, ಉದ್ದು, ಹೆಸರು ಮೊದಲಾದ ಬೆಳೆಗಳನ್ನು ಸರಕಾರ ಖರೀದಿಸಬೇಕಿತ್ತು. ಈ ಕುರಿತು ಕೂಡಲೇ ಸರಕಾರ ಕ್ರಮ ವಹಿಸಬೇಕು. ಬೆಲೆ ಕುಸಿದಿರುವ ಈರುಳ್ಳಿಯನ್ನು ಖರೀದಿ ಮಾಡಬೇಕು ಎಂದು ಅವರು ಆಗ್ರಹಿಸಿದರು.

2025-26ನೆ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ ಶೇ.30ರಷ್ಟು ಮಾತ್ರ ಅನುದಾನ ಬಳಕೆಯಾಗಿದೆ. ಆರೆಸ್ಸೆಸ್ ಬಗ್ಗೆ ಟೀಕೆ ಮಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೇವಲ ಶೇ.11.02ರಷ್ಟು, ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86ರಷ್ಟು ಅನುದಾನ ಬಳಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಶೇ.46, ಪಶುಸಂಗೋಪನೆಯಲ್ಲಿ ಶೇ.44, ಗ್ರಾಮೀಣಾಭಿವೃದ್ಧಿಯಲ್ಲಿ ಶೇ.11 ಹೀಗೆ ಎಲ್ಲ ಇಲಾಖೆಗಳಲ್ಲಿ ಅನುದಾನ ಬಳಕೆಯೆ ಆಗಿಲ್ಲ ಎಂದು ಅಶೋಕ್ ಟೀಕಿಸಿದರು.

ಈಗಾಗಲೇ ನಿವೇಶನ ಪಡೆದವರಿಗೆ ‘ಎ’ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದುದರಿಂದ, ಜನರು ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಯೋಜನೆ ಎಂದು ದೂರಿದ ಅವರು, ನವೆಂಬರ್‍ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದ್ದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್ ನಾಯಕರೆ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News