×
Ad

ಬಹುಭಾಷಾ ನಟ ಪ್ರಕಾಶ್ ರಾಜ್ ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

Update: 2025-10-30 22:29 IST

ಪ್ರಕಾಶ್ ರಾಜ್

ಬೆಂಗಳೂರು : ರಾಜ್ಯ ಸರಕಾರದ 2025ನೇ ಸಾಲಿನ ʼಕನ್ನಡ ರಾಜ್ಯೋತ್ಸವ ಪ್ರಶಸ್ತಿʼ ಪ್ರಕಟವಾಗಿದ್ದು, ಬಹುಬಾಷಾ ನಟ ಪ್ರಕಾಶ್ ರಾಜ್ ಅವರು ಚಲನಚಿತ್ರ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಚಲನಚಿತ್ರ ನಟ ಪ್ರಕಾಶ್ ರಾಜ್ ಅವರು 1965ರ ಮಾ.26ರಂದು ಬೆಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್‍ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ, ಉನ್ನತ ಶಿಕ್ಷಣ ಪಡೆಯಲು ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್‍ಗೆ ಸೇರಿದರು.

ಅವರು ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ವೇದಿಕೆ ಕಾರ್ಯಕ್ರಮಗಳಲ್ಲಿ ನಟಿಸುತ್ತಿದ್ದರು. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಬೀದಿ ನಾಟಕ ಪ್ರದರ್ಶನಗಳನ್ನು ನೀಡಿದ್ದಾರೆ. ನಂತರ ದೂರದರ್ಶನದ ಬಿಸಿಲು ಕುದುರೆ ಮತ್ತು ಗುಡ್ಡದ ಭೂತ ಧಾರಾವಾಹಿಗಳಲ್ಲಿ ನಟಿಸಿದರು.

ಪ್ರಕಾಶ್ ರಾಜ್ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯ ಸುಮಾರು 400ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿದ್ದು, ಭಾರತೀಯ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಚಲನಚಿತ್ರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.

ಅವರಿಗೆ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ಎಂಟು ನಂದಿ ಪ್ರಶಸ್ತಿಗಳು, ಎಂಟು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳು, ಆರು ಫಿಲ್ಮ್‌ ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿವೆ. ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ, ಇಂಗ್ಲಿಷ್‌ ಮತ್ತು ಮರಾಠಿ ಭಾಷೆಗಳಲ್ಲಿ ಅವರು ನಿರರ್ಗಳತೆಯಿಂದ ಮಾತನಾಡಬಲ್ಲವರಾಗಿದ್ದಾರೆ. ಹೀಗಾಗಿ ಅವರು ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆಯ ನಟರಲ್ಲಿ ಒಬ್ಬರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News