×
Ad

‘ಬೆಂಗಳೂರು ನಗರಾಭಿವೃದ್ಧಿ ಖಾತೆ’ಗಾಗಿ ರಾಮಲಿಂಗಾರೆಡ್ಡಿ ಪಟ್ಟು; ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ?

Update: 2026-06-04 22:08 IST

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದ್ದು, ‘ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೇ ನೀಡಬೇಕು. ಇಲ್ಲವಾದರೆ ನನಗೆ ಯಾವುದೇ ಖಾತೆಯೂ ಬೇಡ, ಶಾಸಕನಾಗಿಯೇ ಮುಂದುವರೆಯುತ್ತೇನೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ಸ್ಪೋಟಗೊಂಡಿದ್ದು, ನೂತನ ಮುಖ್ಯಮಂತ್ರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಆಗಿರುವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಬಹುದಿನಗಳಿಂದಲೂ ಕಣ್ಣಿಟ್ಟಿದ್ದರು.

ಆದರೆ, ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ರಾಮಲಿಂಗಾರೆಡ್ಡಿ ಅಸಮಾಧಾನಕ್ಕೆ ಕಾರಣವಾಗಿದೆ. ‘ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲವಾದರೆ ಸಚಿವ ಸ್ಥಾನವೇ ಬೇಡ. ಶಾಸಕನಾಗಿಯೇ ಮುಂದುವರಿಯುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ’ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆಂದು ಗೊತ್ತಾಗಿದೆ.

ಆದರೆ, ಇದೀಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ರಾಮಲಿಂಗಾರೆಡ್ಡಿಗೆ ಬೇಸರ ಮೂಡಿಸಿದೆ. ಆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ನಡೆದ ಅಧಿಕಾರಿಗಳ ಸಭೆಯಿಂದ ಅರ್ಧದಲ್ಲೇ ರಾಮಲಿಂಗಾರೆಡ್ಡಿ ತೆರಳಿದರು ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News