×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರು ಆರೋಪಿಗಳಿಗೆ ಜಾಮೀನು

Update: 2024-09-23 16:36 IST

 ರೇಣುಕಾಸ್ವಾಮಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಆ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ. ಜಾಮೀನು ಕೋರಿ ಎ16 ಕೇಶವ್ ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಒಬ್ಬರ ಶ್ಯೂರಿಟಿ, ತನಿಖೆ ಸಹಕರಿಸಲು ಸೂಚಿಸಿ ಜಾಮೀನು ನೀಡಿದೆ. ಅರ್ಜಿದಾರ ಕೇಶವ್ ಮೂರ್ತಿ ಪರ ವಕೀಲ ರಂಗನಾಥ್ ರಡ್ಡಿ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್ ಜಾಮೀನು ನೀಡಿ ಆದೇಶಿದೆ.

ಇದೇ ವೇಳೆ ಪ್ರಕರಣದ ಎ17 ನಿಖಿಲ್ ನಾಯ್ಕ್ , ಎ15‌ ಕಾರ್ತಿಕ್‌ಗೆ ಕೂಡಾ ಜಾಮೀನು ಮಂಜೂರು ಆಗಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57 ಸಿಸಿಎಚ್ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ :

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿ ನಗರದ 57ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

ಜಾಮೀನು ಕೋರಿ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ನ್ಯಾಯಾಲಯಕ್ಕೆ ಶನಿವಾರ ಅರ್ಜಿ ಸಲ್ಲಿಸಿದ್ದರು.  ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯದ ಮುಂದೆ ವಿಶೇಷ ಅಭಿಯೋಜಕ(ಎಸ್‍ಪಿಪಿ) ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಕೊಲೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡಕೂಡದು. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜೈಶಂಕರ್, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ ಸೆ.27ಕ್ಕೆ ಮುಂದೂಡಿ ಆದೇಶಿಸಿದರು. ಇದೇ ವೇಳೆ ಪ್ರಕರಣದ ಒಂದನೇ ಆರೋಪಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News