ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಪ್ರದೂಷ್ ರಾವ್‌ಗೆ ಸಮನ್ಸ್ ಜಾರಿಗೊಳಿಸಿದ ಸೆಷನ್ಸ್ ಕೋರ್ಟ್
ದರ್ಶನ್/ರೇಣುಕಾಸ್ವಾಮಿ
ಬೆಂಗಳೂರು: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ರಾವ್‌ಗೆ (ಎ14) ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 2ರಂದು ಪ್ರದೂಷ್ ರಾವ್‌ನನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಶುಕ್ರವಾರ ವಿಚಾರಣೆ ನಡೆಸಿದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸುಜಾತಾ ಎಂ.ಸಾಂಬ್ರಾಣಿ ಅವರು ಈ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದರು.
ಇದೇ ವೇಳೆ, ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಕಾರು ಚಾಲಕನಾದ ಎಂ. ಲಕ್ಷ್ಮಣ್ (ಎ12) ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಆಗಸ್ಟ್ 31ರಂದು ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ. ಜತೆಗೆ, ಅನಾರೋಗ್ಯದಿಂದ ಬಳಲುತ್ತಿರುವ ಪ್ರಕರಣದ ಮೊದಲನೇ ಆರೋಪಿ ನಟಿ ಪವಿತ್ರಾ ಗೌಡಗೆ ಜೈಲಿನಲ್ಲಿ ಕಲ್ಪಿಸಲಾಗಿರುವ ವೈದ್ಯಕೀಯ ನೆರವುಗಳ ಕುರಿತ ವರದಿಯನ್ನು ಇ-ಮೇಲ್ ಮೂಲಕ ಆಗಸ್ಟ್ 31ರಂದು ಸಲ್ಲಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.
ಇದಕ್ಕೂ ಮುನ್ನ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಸದ್ಯ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಪ್ರದೂಷ್‌ನನ್ನು (ಮಾಫಿ ಸಾಕ್ಷಿ) ಆಗಸ್ಟ್ 31ರಂದು ವಿಚಾರಣೆ ನಡೆಸಲಾಗುವುದು. ಇದರಿಂದ, ಆತನನ್ನು ನ್ಯಾಯಾಲಯದ ಮುಂದೆ ಖುದ್ದು ಹಾಜರುಪಡಿಸಲು ಜೈಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದರು.
ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಈ ನ್ಯಾಯಾಲಯವು ಆಗಸ್ಟ್ 25ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಆದ್ದರಿಂದ, ಪ್ರದೂಷ್‌ನನ್ನು ಪ್ರಾಸಿಕ್ಯೂಷನ್ ವಿಚಾರಣೆ ನಡೆಸುವುದನ್ನು ಸೆಪ್ಟೆಂಬರ್ 2ರವರೆಗೆ ಮುಂದೂಡಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಸಾಕ್ಷ್ಯ ದಾಖಲಿಸಲು ಪ್ರದೂಷ್‌ಗೆ ಸಮನ್ಸ್ ಜಾರಿ ಮಾಡಿತು. ಜೈಲಿನಲ್ಲಿರುವ ಆತನನ್ನು ಸೆಪ್ಟೆಂಬರ್ 2ರಂದು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಬೇಕು. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಅಧಿಕಾರಿಯು ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿತಲ್ಲದೆ, ಅಂದು ಪವಿತ್ರಾ ಗೌಡ ಮತ್ತು ದರ್ಶನ್ ಸೇರಿ ಜೈಲಿನಲ್ಲಿರುವ ಆರು ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲು ಸೂಚಿಸಿತು.