×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ, ದರ್ಶನ್‌ಗೆ ಹೈಕೋರ್ಟ್ ನೋಟಿಸ್

Update: 2026-06-16 23:32 IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೃತನ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ನಿರಾಕರಿಸಲಾಗಿದೆ ಎಂದು ಆಕ್ಷೇಪಿಸಿ ಪ್ರಾಸಿಕ್ಯೂಷನ್‌ ಸಲ್ಲಿಸಿರುವ ಅರ್ಜಿ ಸಂಬಂಧ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ನಟ ದರ್ಶನ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರಾಸಿಕ್ಯೂಷನ್‌ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ. ಪ್ರಸನ್ನ ಕುಮಾರ್ ಅವರು, ಭಾರತೀಯ ಸಾಕ್ಷ್ಯ ಅಧಿನಿಯಮ–1872ರ ಸೆಕ್ಷನ್‌ 154ರ ಅನುಸಾರ ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಕರೆಸಿದ್ದ ಸಾಕ್ಷಿಯು (ರತ್ನಪ್ರಭಾ) ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ, ಸಾಕ್ಷಿ ತನ್ನ ಹೇಳಿಕೆಯಿಂದ ಹಿಂದೆ ಸರಿದಾಗ, ನಮ್ಮ ಮನವಿಯ ಮೇರೆಗೆ ನ್ಯಾಯಾಲಯವೇ ವಿವೇಚನೆ ಬಳಸಿ ಪಾಟಿ ಸವಾಲು ನಡೆಸಲು ಅನುಮತಿ ನೀಡಬೇಕಿತ್ತು. ಆದರೆ, ನಮ್ಮ ಮನವಿಯನ್ನು ಸೆಷನ್ಸ್ ನ್ಯಾಯಾಲಯ ತಳ್ಳಿ ಹಾಕಿದೆ ಎಂದರು.

ಈ ಸಂಬಂಧ ಪ್ರಾಸಿಕ್ಯೂಷನ್‌ ಸಲ್ಲಿಸಿದ್ದ ಅರ್ಜಿಯನ್ನು ಸಿಟಿ ಸಿವಿಲ್‌ ಮತ್ತು ಸೆಷನ್ಸ್ ನ್ಯಾಯಾಲಯ 2026ರ ಜನವರಿ 17ರಂದು ತಿರಸ್ಕರಿಸಿದೆ. ಆದ್ದರಿಂದ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅನುಮತಿ ನೀಡಿ ಆದೇಶಿಸಬೇಕು ಎಂದು ಕೋರಿದರು.

ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಪವಿತ್ರಾಗೌಡ, ದರ್ಶನ್‌ ಸೇರಿದಂತೆ ಉಳಿದ ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News