ಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ: ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಯಾವುದೇ ಸರಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದು ಕಂಡುಬಂದರೆ, ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ), ಉಪನಿರ್ದೇಶಕರು (ಡಿಡಿಪಿಐ) ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಸರಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿಗತಿ ಕುರಿತು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಕ್ಕಳ ಸುರಕ್ಷತೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯದ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಮಾಡಲಾಗಿದೆ. ಇದೇ ಅವಧಿಯಲ್ಲಿ 1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೋಳಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ತಾರಸಿಯ ಗಾರೆ ಕುಸಿದಿರುವ ಘಟನೆ ಹಾಗೂ ಕಲಬುರಗಿ ನಗರದ ಸರಕಾರಿ ಮಹಿಳಾ ಪಿಯು ಕಾಲೇಜಿನ ಚಾವಣಿ ಕುಸಿತದ ಪ್ರಕರಣಗಳು ಸರಕಾರದ ಗಮನಕ್ಕೆ ಬಂದಿವೆ. ಎರಡೂ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.