×
Ad

ನಗರ ಸ್ಥಳೀಯ ಸಂಸ್ಥೆ, ಗ್ರಾ.ಪಂ.ಗಳಿಗೆ ಮೀಸಲು ನಿಗದಿ: ಉತ್ತರಿಸಲು ಸರಕಾರಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

Update: 2026-01-28 18:15 IST

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಅಂತಿಮ ಅವಕಾಶ ನೀಡಿದೆ.

ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ರಾಜ್ಯ ಚುನವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ರಾಜ್ಯದ ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳ ಅವಧಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಸಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಸಾಂವಿಧಾನಿಕ ನ್ಯಾಯಪೀಠದ ತೀರ್ಪಿಗೆ ಚುನಾವಣಾ ಆಯೋಗ ಬದ್ಧವಾಗಿದ್ದು, ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ಈ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಂಬಂಧ ನವೆಂಬರ್ 12ರಂದೇ ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ ಎಂದು ತಿಳಿಸಿದರು.

ರಾಜ್ಯ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸರಕಾರಿ ವಕೀಲೆ ನಿಲೋಫರ್ ಅಕ್ಬರ್ ಅವರು, ಮೀಸಲಾತಿ ಸಿದ್ಧಪಡಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ವಾದ ಮುಂದುವರಿಸಿದ ಫಣೀಂದ್ರ, ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳು ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಅವಧಿ ಪೂರ್ಣಗೊಂಡಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಂತಿಮವಾಗಿ, ಒಂದು ವಾರ ಕಾಲಾವಕಾಶ ನೀಡುವಂತೆ ಸರಕಾರದ ಪರ ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಕುರಿತು ಉತ್ತರಿಸಲು ಸರಕಾರಕ್ಕೆ ಅಂತಿಮ ಅವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

ಚುನಾವಣಾ ಆಯೋಗದ ಮನವಿ ಏನು?

ರಾಜ್ಯದ ಗ್ರಾ.ಪಂ.ಗಳಿಗೆ 2020ರಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಅವುಗಳ ಅವಧಿ ಜನವರಿ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಜೊತೆಗೆ, ಅವಧಿ ಪೂರ್ಣಗೊಂಡಿರುವ 187 ನಗರ ಸ್ಥಳೀಯ ಸಂಸ್ಥೆಗಳಿಗೂ (47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ) ಚುನಾವಣೆ ನಡೆಸಬೇಕಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಮೀಸಲಾತಿ ನಿಗದಿಯಾಗಬೇಕಿದ್ದು, ಮೀಸಲಾತಿ ನಿಗದಿಪಡಿಸುವುದು ರಾಜ್ಯ ಸರಕಾರದ  ಜವಾಬ್ದಾರಿಯಾಗಿದೆ. ಅದೇ ರೀತಿ, ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದೆ. ಮೀಸಲಾತಿ ಅಂತಿಮಗೊಳ್ಳುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಸರಕಾರಕ್ಕೆ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News