ಬೆಂಗಳೂರು : ಉತ್ತರ ಕರ್ನಾಟಕ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಸಮಗ್ರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಈ ಬಾರಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ಅರ್ಥಪೂರ್ಣ ಇರಲಿದ್ದು, ಅಗತ್ಯಬಿದ್ದರೆ ಮಧ್ಯರಾತ್ರಿ 12ರವರೆಗೂ ನಾನು ಕಲಾಪ ನಡೆಸುತ್ತೇನೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದವರು, ಮುಂಗಾರು ಅಧಿವೇಶನದಲ್ಲಿ ಉಂಟಾದ ಗದ್ದಲದ ಸನ್ನಿಸವೇಶ ಡಿ.2ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಸೃಷ್ಟಿಯಾಗದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅರ್ಥಪೂರ್ಣವಾಗಿ ನಡೆಯಲಿದೆ. ರಾತ್ರಿ 10 ಅಥವಾ ಅಗತ್ಯಬಿದ್ದರೆ ಮಧ್ಯರಾತ್ರಿ 12ರವರೆಗೂ ನಾನು ಕಲಾಪ ನಡೆಸುತ್ತೇನೆ. ಆ ಮೂಲಕ ಹೆಚ್ಚು ವಿಷಯಗಳ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಹೇಳಿದರು.

ಡಿ.2ರಿಂದ ಆರಂಭವಾಗಿ ಒಂಬತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ರಾಜ್ಯದ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಪೂರ್ಣ ಸಮಯವನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳಲಿವೆ ಎಂಬ ವಿಶ್ವಾಸ ನನಗಿದೆ. ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಯುವ ದೃಷ್ಟಿಯಿಂದ ಆ ಭಾಗದ ಸಮಸ್ಯೆಗಳ ಕುರಿತ ಚರ್ಚೆಗೆ ಹೆಚ್ಚು ಆದ್ಯತೆ ನೀಡುವಂತೆ ಅಲ್ಲಿನ ಸದಸ್ಯರು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಸಮಯ ನೀಡಲಾಗುವುದು ಎಂದು ಅವರು ತಿಳಿಸಿದರು.

ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಸದಸ್ಯರು ಪ್ರತ್ಯೇಕವಾಗಿ ಭೇಟಿಯಾಗಿ, ಅಧಿವೇಶನದಲ್ಲಿ ತಮ್ಮ ಭಾಗದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಸಮಯಾವಕಾಶ ಕೋರಿದ್ದಾರೆ. ಅವಕಾಶ ನೀಡುವುದಾಗಿಯೂ ಹೇಳಿದ್ದೇನೆ. ಶನಿವಾರ ಕೂಡ ಕಾರ್ಯಕಲಾಪಗಳು ನಡೆಯಲಿವೆ. ಈ ಅವಧಿಯಲ್ಲಿ ಮೇಲ್ಮನೆಗೆ 120 ಚುಕ್ಕೆ ಗುರುತಿನ ಮತ್ತು 1,115 ಚುಕ್ಕೆ ಗುರುತಿಲ್ಲದ ಸೇರಿ 1,335 ಪ್ರಶ್ನೆಗಳು ಬರಲಿವೆ. ನಿಯಮ 56ರ ಅಡಿ 66 ಹಾಗೂ ನಿಯಮ 303ರ ಅಡಿ 32 ವಿಷಯಗಳು ಚರ್ಚೆಗೆ ಬರಲಿವೆ ಎಂದು ಸಲೀಂ ಅಹ್ಮದ್ ಮಾಹಿತಿ ನೀಡಿದರು.

ಅಧಿವೇಶನ ವಿಸ್ತರಣೆ ಬಗ್ಗೆ ಕಲಾಪ ಸಲಹಾ ಸಮಿತಿ(ಬಿಎಸಿ)ಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುವುದು. ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ಜನರ ಹಕ್ಕು. ಬೆಳಗಾವಿಯಲ್ಲಿ ಈಚೆಗೆ ನಾನು ಮತ್ತು ಸ್ಪೀಕರ್ ಭೇಟಿ ನೀಡಿದಾಗ, ಸಾಧ್ಯವಾದಷ್ಟು ಪ್ರತಿಭಟನೆಗಳಿಗೆ ಸ್ಪಂದಿಸಿ ಅಧಿವೇಶನಕ್ಕೂ ಮೊದಲೇ ಬಗೆಹರಿಸುವಂತೆ ಸ್ಥಳೀಯ ಜಿಲ್ಲಾಧಿಕಾರಿಗೆ ಸೂಚಿಸಿದ್ದೇವೆ. ಜತೆಗೆ ಸಂಬಂಧಿಸಿದ ಸಚಿವರಗೂ ಮನವಿ ಮಾಡಲಾಗಿದೆ. ಇನ್ನು ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಅವರು ತಿಳಿಸಿದರು.

ಮತಾಂತರ ಕಾಯ್ದೆ ವಾಪಸ್ ಬಗ್ಗೆ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ;

‘ಮತಾಂತರ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ನ. 30ರಂದು ಸಂಪುಟ ಸಭೆ ನಡೆಯಲಿದೆ. ಅಲ್ಲಿ ಬಹುಶಃ ಅಧಿವೇಶನಕ್ಕೆ ಬರುವ ವಿಧೇಯಕಗಳ ಪಟ್ಟಿ ಅಂತಿಮಗೊಳ್ಳಬಹುದು’ ಎಂದು ಪ್ರಶ್ನೆಯೊಂದಕ್ಕೆ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.