×
Ad

ಸ್ಯಾಂಡಲ್‌ವುಡ್ ಹಿರಿಯ ನಟಿ ಸರೋಜಾದೇವಿ ನಿಧನ : ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

Update: 2025-07-14 12:47 IST

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ನಿಧನರಾಗಿದ್ದಾರೆ. ಸರೋಜಾದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು.

ಸಿದ್ದರಾಮಯ್ಯ, ಮುಖ್ಯಮಂತ್ರಿ

ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ.. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ‌. ಕನ್ನಡ ಸೇರಿದಂತೆ ಪಂಚ ‌ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು‌. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಮೇರುನಟರಾದ ಡಾ.ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು.

ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.

ಆರ್‌.ಅಶೋಕ್‌, ವಿಪಕ್ಷ ನಾಯಕ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News