‘ಕುಂದಗೋಳ ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು’ | ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸಂತೋಷ್ ಲಾಡ್ ಸೂಚನೆ
ಸಂತೋಷ್ ಲಾಡ್
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ, ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಶನಿವಾರ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಇತ್ತೀಚೆಗೆ ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲಾ ಪಂಚಾಯತಿ, ಜಿಲ್ಲಾಡಳಿತದಿಂದಲೂ ಕೆರೆಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಂತೋಷ್ ಲಾಡ್ ತಿಳಿಸಿದರು.
ಗುಡೇನಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ 50 ಲಕ್ಷ ರೂ. ಅನುದಾನವನ್ನು ನೀಡಲಾಗಿತ್ತು. ಕೆರೆ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಅವರು ತಿಳಿಸಿದರು.
ಅಂಗನವಾಡಿ ಕೇಂದ್ರ ಸ್ಥಳಾಂತರ: ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದು ಸಂತೋಷ್ ಲಾಡ್ ಹೇಳಿದರು.
ಕುಟುಂಬಸ್ಥರಿಗೆ ಪರಿಹಾರ ಮುಖ್ಯಮಂತ್ರಿಗೆ ಮನವಿ: ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಲಾಡ್ ಫೌಂಡೇಶನ್ ನಿಂದ ಧನಸಹಾಯ: ಸಂತೋಷ್ ಲಾಡ್ ಫೌಂಡೇಶನ್‍ನಿಂದ ಮೃತರ ಕುಟುಂಬಸ್ಥರಿಗೆ 4 ಲಕ್ಷ ರೂ. ಸಹಾಯಧನವನ್ನು ಸಚಿವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಎಂ.ಆರ್.ಪಾಟೀಲ್, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.