×
Ad

ನಮ್ಮ ಸರಕಾರ ಸಾಧನಾ ಸಮಾವೇಶ ಮಾಡಿದರೆ ಬಿಜೆಪಿಗೆ ಏನು ಸಮಸ್ಯೆ? : ಸತೀಶ್ ಜಾರಕಿಹೊಳಿ

Update: 2025-05-18 19:37 IST

ಸತೀಶ್ ಜಾರಕಿಹೊಳಿ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಸಾಧನಾ ಸಮಾವೇಶ ಮಾಡಿದರೆ, ಬಿಜೆಪಿಯವರಿಗೆ ಏನು ಸಮಸ್ಯೆ? ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳಿಂದ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಬಿಜೆಪಿಯವರು ಸಾಧನಾ ಸಮಾವೇಶ ಮಾಡಿ ಅವರ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲಿ ಅವರಿಗೆ ಬೇಡ ಎಂದು ಹೇಳಿದವರು ಯಾರು? ನಾವು ನಮ್ಮ ಸಾಧನೆಗಳ ಬಗ್ಗೆ ಸಮಾವೇಶ ಮಾಡಿ ಜನರಿಗೆ ತಿಳಿಸುತ್ತೇವೆ ಎಂದರು.

ಡಿಸೆಂಬರ್‌ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇರುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಡಿಸೆಂಬರ್ ತಿಂಗಳು ಇನ್ನೂ ಬಹಳ ದೂರವಿದೆ. ಆಗ ಸಂಪುಟ ವಿಸ್ತರಣೆ ಆದರೆ ನೋಡೋಣ. ಬಹಳಷ್ಟು ಹಿರಿಯ ಶಾಸಕರು ಸಚಿವರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಬೇಕು. ಸಚಿವ ಸಂಪುಟ ವಿಸ್ತರಣೆ ಆದರೆ ಒಳ್ಳೆಯದೇ? ಹೊಸ ನಾಯಕತ್ವ ಬೆಳೆಯಲು ಸಾಧ್ಯವಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ರಾಜ್ಯ ಸರಕಾರದ ಐದು ಗ್ಯಾರಂಟಿಗಳು ಆದಷ್ಟು ಬೇಗ ಸ್ಥಗಿತಗೊಳ್ಳಲಿವೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ನಮ್ಮ ಸರಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಮೊದಲ ದಿನದಿಂದಲೂ ಬಿಜೆಪಿಯವರು ಗ್ಯಾರಂಟಿಗಳು ಸ್ಥಗಿತವಾಗುತ್ತವೆ ಎಂದು ಹೇಳಿಕೊಂಡೇ ಬರುತ್ತಿದ್ದಾರೆ. ಎರಡು ವರ್ಷಗಳಿಂದ ಯಶಸ್ವಿಯಾಗಿ ಗ್ಯಾರಂಟಿಗಳು ನಡೆದುಕೊಂಡು ಬರುತ್ತಿವೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿ ಮುಂದುವರೆಯುತ್ತವೆ ಎಂದು ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News