×
Ad

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ : ಸಚಿವ ಎಂ.ಬಿ.ಪಾಟೀಲ್

Update: 2025-10-23 17:40 IST

ಎಂ.ಬಿ.ಪಾಟೀಲ್

ಬೆಂಗಳೂರು : ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಇದೆ. ಆದರೆ, ನಮ್ಮಲ್ಲಿ ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆಂಬುದು ಗೊತ್ತಿಲ್ಲ. ಆದರೆ, ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯನವರಿಗೆ ಕೊನೆ ಚುನಾವಣೆ ಆಗಿರಬಹುದು. ಮುಂದೆಯೂ ಅವರ ನಾಯಕತ್ವ ಅಗತ್ಯವಿದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಬಿಟ್ಟು ಚುನಾವಣೆ ಮಾಡಲು ಆಗುವುದಿಲ್ಲ. ಡಾ.ಯತೀಂದ್ರ ಹೇಳಿಕೆಗೆ ಬಣ್ಣ ಹಚ್ಚುವ ಅಗತ್ಯವಿಲ್ಲ. ಸಚಿವ ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ಪ್ರಮುಖ ನಾಯಕರು. ನಮ್ಮ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ತೀರ್ಮಾನವೇ ಅಂತಿಮವಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ತಿಳಿಸಿದರು.

ಯಾರೂ ಕೂಡ ಸ್ವಯಂ ಘೋಷಿತ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಪಕ್ಷದ ಎಲ್ಲ ಶಾಸಕರ ಒಪ್ಪಿಗೆಯೂ ಅಗತ್ಯವಿದೆ. ಆ ಮೇಲೆ ಜನರು ಹೇಳಬೇಕು. ಅನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯದಲ್ಲಿ ಸಾಕಷ್ಟು ಜನ ಅರ್ಹರು, ಸಮರ್ಥರು ಇದ್ದಾರೆ. ಆದರೆ, ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಅವರು ತಿಳಿಸಿದರು.

ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಸದಾಶಿವನಗರದಲ್ಲೇ ನಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿದ್ದು, ಹೈಕಮಾಂಡ್ ಕೂಡ ಇಲ್ಲೇ ಇದೆ. ಖಾತೆ ಹಂಚಿಕೆ ಮುಖ್ಯಮಂತ್ರಿ ಪರಮಾಧಿಕಾರ. ನಾವು ಇಂತಹ ಖಾತೆಯೇ ಬೇಕೆಂದು ಕೇಳಲು ಆಗುವುದಿಲ್ಲ. ನಮ್ಮ ಆಸೆಯನ್ನು ವ್ಯಕ್ತಪಡಿಸಬಹುದು ಅಷ್ಟೇ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News