ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ
ಬೆಂಗಳೂರು : ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ(ಮಾ.1) ಪ್ರಾರಂಭವಾಗಲಿದ್ದು, ಪರೀಕ್ಷೆಯನ್ನು 7,13,862 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಈಗಾಗಲೇ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಪೈಕಿ 6,61,474 ವಿದ್ಯಾರ್ಥಿಗಳು ಹೊಸಬರಾಗಿದ್ದು, 34,071 ಪುನರಾವರ್ತಿತ, 18,317 ಖಾಸಗಿ ವಿದ್ಯಾರ್ಥಿಗಳಾಗಿದ್ದರೆ. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ಮಂದಿ ತೃತೀಯ ಲಿಂಗಿಗಳು ಇದ್ದಾರೆ. 2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 5,050 ಕಾಲೇಜುಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆಗಳು 1,171 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. 365 ಪ್ರಶ್ನೆಪತ್ರಿಕಾ ವಿತರಣಾ ಮಾರ್ಗಗಳು, 1,171 ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷರು, ಉಪ/ಜಂಟಿ ಅಧೀಕ್ಷಕರು, ಉತ್ತರ ಪತ್ರಿಕೆಗಳ/ಪ್ರಶ್ನೆ ಪತ್ರಿಕೆಗಳ ಪಾಲಕರನ್ನು ನೇಮಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ವೆಬ್ ಕಾಸ್ಟಿಂಗ್ ಮುಖಾಂತರ ವೀಕ್ಷಣ ಮಾಡಲಾಗುತ್ತಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಪರಿಗಣಿಸಿ ಅಲ್ಲಿ ಝೆರಾಕ್ಸ್, ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚಿಸಲಾಗಿದೆ. ಪರೀಕ್ಷೆ ನಡೆಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ವೇಳಾಪಟ್ಟಿ: ಮಾ.1ರಂದು ಕನ್ನಡ, ಅರೇಬಿಕ್ ಪರೀಕ್ಷೆಗಳು, ಮಾ.3ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಭಾಷಾ ಪರೀಕ್ಷೆಗಳು ನಡೆಯಲಿವೆ.
ಮಾ.5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.7ರಂದು ಇತಿಹಾಸ, ಭೌತಶಾಸ್ತ್ರ, ಮಾ.10ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಮಾ.12ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮಾ.13ರಂದು ಅರ್ಥಶಾಸ್ತ್ರ, ಮಾ.15ರಂದು ಇಂಗ್ಲೀಷ್, ಮಾ.17ರಂದು ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಮಾ.18ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮಾ.19ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್ ಪರೀಕ್ಷೆಗಳು ಹಾಗೂ ಮಾ.20ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮಾ.19ರಂದು ನಡೆಯುವ ಪರೀಕ್ಷೆಗಳು ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದ್ದು, ಉಳಿದ ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.