×
Ad

ನ.4ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’ : ಸಚಿವ ಶರಣಪ್ರಕಾಶ್ ಪಾಟೀಲ್‌

Update: 2025-09-19 20:14 IST

ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಸೆ.19 : ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಸಲುವಾಗಿ ನ.4ರಿಂದ ಮೂರು ದಿನಗಳ ಕಾಲ ‘ಬೆಂಗಳೂರು ಕೌಶಲ್ಯ ಶೃಂಗಸಭೆ-2025’ ಆಯೋಜಿಸಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಉದ್ಯೋಗ ಅವಕಾಶ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‍ನಲ್ಲಿ ನ.4 ರಿಂದ ನ.6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮಹತ್ವಾಕಾಂಕ್ಷೆಯ ಸಮಾವೇಶ ಆಯೋಜನೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರಕಾರ ಅವಕಾಶಗಳ ಬೃಹತ್ ವೇದಿಕೆ ಒದಗಿಸುತ್ತಿದೆ ಎಂದು ಅವರು ಉಲ್ಲೇಖಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದ ಅವರು, ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೀಗಾಗಿ ಕೌಶಲ್ಯ ಶೃಂಗಸಭೆ ಆಯೋಜಿಸಬೇಕು ಎಂದು ಈ ಹಿಂದೆಯೇ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಈ ಶೃಂಗ ಸಭೆ ಕಾರ್ಯರೂಪಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಜಂಟಿ ಸಹಯೋಗದೊಂದಿಗೆ ಈ ಶೃಂಗಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಈ.ವಿ.ರಮಣ ರೆಡ್ಡಿ ಮಾತನಾಡಿ, ಯುವನಿಧಿ ಗ್ಯಾರಂಟಿ ಯೋಜನೆಯಿಂದ ಸಾವಿರಾರು ಯುವಕರಿಗೆ ಅನುಕೂಲವಾಗಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಬೇಕು ಎನ್ನುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ಈ ರೀತಿಯ ವಿಶೇಷ ತರಬೇತಿ ದೊರೆತರೆ ಯುವ ಸಮೂಹ ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಉದ್ಯೋಗ ಗಿಟ್ಟಿಸಲು ಸಮರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಕೌಶಲ್ಯ ಶೃಂಗಸಭೆ ಅತ್ಯುತ್ತಮ ವೇದಿಕೆ ಒದಗಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷೆ ಶಿವಕಾಂತಮ್ಮ ನಾಯಕ್, ಕೌಶಲ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ.ನಾಗರಾಜ್ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News