ಅಧಿಕಾರ ಹಂಚಿಕೆ, ಸಂಪುಟ ಪುನರ್ ರಚನೆ ಕುರಿತ ಚರ್ಚೆ ಮಧ್ಯೆ ಸಿಎಂ, ಡಿಸಿಎಂ ದಿಲ್ಲಿಗೆ ಪ್ರಯಾಣ
ಬೆಂಗಳೂರು : ಅಧಿಕಾರ ಹಂಚಿಕೆ, ಸಂಪುಟ ಪುನರ್ ರಚನೆ ಕುರಿತ ಚರ್ಚೆಯ ಮಧ್ಯೆ, ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ದಿಲ್ಲಿಗೆ ಆಹ್ವಾನಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಉಭಯ ನಾಯಕರು ಸೋಮವಾರ (ಮೇ 25) ರಾತ್ರಿಯೇ ಹೊಸದಿಲ್ಲಿಗೆ ತೆರಳಿದ್ದು, ಅವರೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.
ದಿಲ್ಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇನ್ನಿತರ ಮುಖಂಡರನ್ನು ಸಿಎಂ, ಡಿಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.
ಎರಡು-ಮೂರು ತಿಂಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ಡಿಸಿಎಂ ಬೆಂಬಲಿಗರು ಪರ-ವಿರುದ್ಧ ಹೇಳಿಕೆಗಳು ನೀಡುತ್ತಿದ್ದಾರೆ. ಈ ವಿಚಾರ ಪಕ್ಷದ ವಲಯದಲ್ಲಿ ಗೊಂದಲವನ್ನು ಸೃಷ್ಟಿಸಿದ್ದು, ವರಿಷ್ಠರು ಸ್ಪಷ್ಟ ತೀರ್ಮಾನ ಪ್ರಕಟಿಸಬೇಕು ಎಂಬ ಆಗ್ರಹವು ಕೇಳಿಬರುತ್ತಿದೆ.
ಆ ಹಿನ್ನೆಲೆಯಲ್ಲಿಯೇ ‘ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೆರಿ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ನಂತರ ಕರ್ನಾಟಕ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಗಮನಹರಿಸಲಾಗುವುದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದರು.
ಈ ಮಧ್ಯೆ ಜೂನ್ 18ಕ್ಕೆ ರಾಜ್ಯಸಭೆಯು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವ ಕುರಿತು ಉಭಯರ ಜೊತೆ ಹೈಕಮಾಂಡ್ ನಾಯಕರು, ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಿಲ್ಲಿಗೆ ಕರೆದಿದ್ದಾರೆ: ‘ನನ್ನನ್ನು ಪಕ್ಷದ ವರಿಷ್ಠರು ದಿಲ್ಲಿಗೆ ಆಹ್ವಾನಿಸಿದ್ದಾರೆ. ಹೀಗಾಗಿ ನಾನು ದಿಲ್ಲಿಗೆ ತೆರಳುತ್ತಿದ್ದೇನೆ. ಆದರೆ, ಸಭೆಯ ಕಾರ್ಯಸೂಚಿ ಏನೆಂದು ತಿಳಿದಿಲ್ಲ. ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನನಗೆ ಕರೆ ಮಾಡಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ಸಂಬಂಧ ಊಹಾಪೋಹಗಳು ಯಾವಾಗಲೂ ಇರುತ್ತವೆ. ಆದರೆ, ನಾನು ನಾಳೆ ಹೊಸದಿಲ್ಲಿಯಲ್ಲಿನ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಈ ನಡುವೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ‘ಪಕ್ಷ ವರಿಷ್ಠರು ಕರೆದಾಗಲೆಲ್ಲಾ ನಾವು ಹೋಗಲೇಬೇಕು. ನನಗೆ ದಿಲ್ಲಿಗೆ ಬರುವಂತೆ ಕರೆಬಂದರೆ ಮಾತ್ರ ಹೋಗುತ್ತೇನೆ, ಇಲ್ಲದಿದ್ದರೆ ಹೋಗುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧ ನನಗೆ ಯಾವುದೇ ಮಾಹಿತಿ ಇಲ್ಲ. ಆ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಏಕೆಂದರೆ ಅದು ನನ್ನ ಕೆಲಸವಲ್ಲ’ ಎಂದು ಸ್ಪಷ್ಟಪಡಿಸಿದರು.