‘ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ’ | ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಸಂಪುಟ ನಿರ್ಣಯ
ಎಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಆರಂಭಿಸಿರುವ ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಗೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಹಾಜರಾಗದ ನಿಯೋಜಿತ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳ ವಿರುದ್ಧ ಸೇವಾ ನಿಯಮಾವಳಿಗೆ ಅನುಗುಣವಾಗಿ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ನಾಳೆ ಜಿಲ್ಲಾಧಿಕಾರಿ-ಸಿಇಒಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ :
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾದ ದಿನ ಕೆಲವೆಡೆ ಸರ್ವರ್ ಸಮಸ್ಯೆಯಾಗಿತ್ತು. ಇದೀಗ ಸಮಸ್ಯೆಯನ್ನು ಬಹುತೇಕ ನಿವಾರಿಸಲಾಗಿದೆ. ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
-ಎಚ್.ಕೆ.ಪಾಟೀಲ್, ಕಾನೂನು ಸಚಿವ