ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ ಮಾಡುವಂತೆ ಸಿಎಂಗೆ ಆಪ್ತ ಸಚಿವರ ಒತ್ತಡ
ಬೆಂಗಳೂರು : ರಾಜ್ಯ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನುವ ಊಹಾಪೋಹಗಳು ಕೇಳಿ ಬರುತ್ತಿವೆ.
ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಶಾಸಕಾಂಗ ಪಕ್ಷದ ಸಭೆ ಕರೆದು, ಎಲ್ಲ ಶಾಸಕರ ಅಭಿಪ್ರಾಯ ಪಡೆದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಪ್ತ ಸಚಿವರು ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಸರಕಾರ ನಿವಾಸ ಕಾವೇರಿಯಲ್ಲಿ ಹಲವು ಸಚಿವರು ಹಾಗೂ ಶಾಸಕರ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ನಡೆದ ಚರ್ಚೆಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಕೆಲವು ಸಚಿವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಸಹಿ ಸಂಗ್ರಹ ಮಾಡೋಣ ಎಂದು ನೀಡಿದ ಸಲಹೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಲಿಲ್ಲ. ನಾಳೆ ಉಪಹಾರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಎಲ್ಲವನ್ನೂ ವಿವರಿಸುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.