ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಸಿಬ್ಬಂದಿ ಕಾರು
ಬೆಂಗಳೂರು, ಅ.13: ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಸಿಬ್ಬಂದಿಯ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಮೆಟ್ರೋ ಸಿಬ್ಬಂದಿಯೊಬ್ಬರು ನಿಲ್ದಾಣದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದರು. ಬಳಿಕ ಹೊರಗಡೆ ತೆರಳಲು ಕಾರನ್ನು ಸ್ಟಾರ್ಟ್ ಮಾಡುವ ವೇಳೆ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಗೊತ್ತಾಗಿದೆ.
ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿರುವ ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು, ‘ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬರ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರಿನ ಡಿಸೇಲ್ ಸೋರಿಕೆಯಾಗಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಇನ್ನಿತರ ಅವಘಡಗಳು ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ.