ಕಾಲ್ತುಳಿತ ಪ್ರಕರಣ | ನ್ಯಾ.ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗದಿಂದ ತನಿಖೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಈ ಪ್ರಕರಣದ ತನಿಖೆಗೆ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚನೆ ಮಾಡಲು ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಮಾಡಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ, ಉಪ ಮುಖ್ಯಮಂತ್ರಿ, ಹಿರಿಯ ಸಚಿವರು, ಮುಖ್ಯಮಂತ್ರಿಯ ಕಾನೂನು ಸಲಹೆಗಾರ, ಅಡ್ವೊಕೇಟ್ ಜನರಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ ಬಳಿಕ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದರು.
ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‍ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‍ಸಿಎ)ಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಬಂಧಿಸಲೂ ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಅಧಿಕಾರಿಗಳ ಅಮಾನತು: ಘಟನೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್‍ಪಾಕ್ ಉಪವಿಭಾಗದ ಎಸಿಪಿ, ಕಬ್ಬನ್ ಪಾರ್ಕ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಠಾಣಾಧಿಕಾರಿ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದರು.
ಮೂರು ಸಂಸ್ಥೆಗಳ ವಿರುದ್ಧ ಸಿಐಡಿ ತನಿಖೆ :
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ನಿರ್ಲಕ್ಷ್ಯ ಕಂಡುಬರುತ್ತಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ನಿನ್ನೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡಿದ್ದರು. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರ ಜೊತೆ ಸರಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ಮೂರು ಸಂಸ್ಥೆಗಳ ವಿರುದ್ಧ ಸಿಐಡಿ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.