×
Ad

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ | ಸರಕಾರಕ್ಕೆ ನ್ಯಾ.ಜಾನ್ ಮೈಕೆಲ್ ಡಿ.ಕುನ್ಹಾ ವಿಚಾರಣಾ ಆಯೋಗದ ವರದಿ ಸಲ್ಲಿಕೆ

Update: 2025-07-11 20:49 IST

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ) ತಂಡವು 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ.4ರಂದು ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ವಿಚಾರಣಾ ಆಯೋಗವು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದೆ.

ಶುಕ್ರವಾರ ಸಂಜೆ ವಿಧಾನಸೌಧದಲ್ಲಿರುವ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನ್ಯಾ.ಜಾನ್ ಮೈಕೆಲ್ ಡಿ.ಕುನ್ಹಾ, ಎರಡು ಸಂಪುಟಗಳಲ್ಲಿರುವ ವಿಚಾರಣಾ ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದರು. ಜು.17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯಲ್ಲಿನ ಶಿಫಾರಸ್ಸುಗಳ ಕುರಿತು ಚರ್ಚೆ ನಡೆಸಿ, ಸರಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಘಟನೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ನಗರ ಪೊಲೀಸ್ ಆಯುಕ್ತ, ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿತ್ತು. ಅಲ್ಲದೇ, ಗುಪ್ತಚರ ವಿಭಾಗದ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರಿಯಲ್ ತನಿಖೆ ಹಾಗೂ ನ್ಯಾ.ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ವಿಚಾರಣಾ ಆಯೋಗದಿಂದ ನ್ಯಾಯಾಂಗ ತನಿಖೆಗೆ ಆದೇಶಿಸಿ ವರದಿ ನೀಡುವಂತೆ ಸೂಚಿಸಿತ್ತು.

ವರದಿ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಅಂಜುಮ್ ಪರ್ವೇಝ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದು ಏನು?: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್.ಸಿ.ಬಿ ಆಟಗಾರರಿಗೆ ಸನ್ಮಾನ ನಡೆದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಲಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಉಚಿತ ಅವಕಾಶ ಕಲ್ಪಿಸಿದ್ದರಿಂದ ನಿರೀಕ್ಷೆಗೂ ಮೀರಿ ಲಕ್ಷಾಂತರ ಜನರು ಜಮಾಯಿಸಿದ್ದರು.

ಕ್ಷಣಾರ್ಧದಲ್ಲೆ ಕ್ರೀಡಾಂಗಣ ತುಂಬಿದ್ದರಿಂದ ಭದ್ರತಾ ಸಿಬ್ಬಂದಿ ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಿದರು. ಈ ವೇಳೆ ಕ್ರೀಡಾಂಗಣದ ಹೊರಭಾಗದಲ್ಲಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು ಪೊಲೀಸರ ನಿಯಂತ್ರಣವನ್ನೂ ಲೆಕ್ಕಿಸದೆ ಪ್ರವೇಶ ದ್ವಾರಗಳ ಮೇಲೆ ಹತ್ತಿ ಒಳಗೆ ನುಗ್ಗಲು ಯತ್ನಿಸಿದಾಗ 12ನೆ ಸಂಖ್ಯೆಯ ಪ್ರವೇಶ ದ್ವಾರದ ಬೃಹದಾಕಾರದ ಗೇಟ್ ಕುಸಿದು ಬಿತ್ತು. ಆಗ ಸ್ಥಳದಲ್ಲಿಯೆ ಇದ್ದ ವ್ಯಕ್ತಿಯೊಬ್ಬ ಮೃತಪಟ್ಟ. ಏಕಾಏಕಿ ಸಂಭವಿಸಿದ ಕಾಲ್ತುಳಿತದಿಂದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 11 ಮಂದಿ ಮೃತಪಟ್ಟಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸರಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚನೆ ಮಾಡಿತ್ತು. ಇವತ್ತು ಅವರು ನನಗೆ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಎರಡು ಸಂಪುಟಗಳುಳ್ಳ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ನಾನು ವರದಿಯನ್ನು ಪೂರ್ಣವಾಗಿ ಓದಲು ಆಗಿಲ್ಲ. ಜು.17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡಿಸಿ, ವಿಚಾರಣಾ ಆಯೋಗ ಏನೇನು ಶಿಫಾರಸ್ಸುಗಳನ್ನು ಮಾಡಿದೆ ಎಂಬುದನ್ನು ನೋಡಿ, ಚರ್ಚಿಸಿ ತಿರ್ಮಾನ ಕೈಗೊಳ್ಳುತ್ತೇವೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News