ರಾಜ್ಯ ಬಜೆಟ್ 2024 : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ನೀಡಿರುವ ಕೊಡುಗೆಗಳೇನು?
ಬೆಂಗಳೂರು : 2024-25ನೇ ಸಾಲಿನಲ್ಲಿ ಶಾಲಾ - ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.
► ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರಕಾರ ವಿಶೇಷ ಆಸಕ್ತಿ ವಹಿಸಿದೆ. ಸರಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.
• ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
• 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
• ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
• ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
• 2,000 ಸರಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.
► ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
► ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
► ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
► ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
► ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳಿಗೆ NEET,JEE,CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
► ರಾಜ್ಯದ ಎಲ್ಲಾ ಸರಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.
► ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.