ಮಾಸಿಕ ಗೌರವಧನ ಹೆಚ್ಚಳಕ್ಕೆ ರಾಜ್ಯ ಸರಕಾರ ಅಸ್ತು; ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ
ಬೆಂಗಳೂರು : ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ 13 ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟ ರವಿವಾರ ಅಂತ್ಯಗೊಂಡಿದೆ.
ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸರಕಾರ ಸಿಹಿಸುದ್ದಿ ನೀಡಿದ್ದು, ಅವರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧರಿಸಿದೆ. 2027ರ ಜನವರಿ 1ರಿಂದ ಈ ಹೆಚ್ಚಳ ಜಾರಿಗೆ ಬರಲಿದ್ದು, ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಕಚೇರಿ ಸೂಚನೆ ನೀಡಿದೆ.
ನವೆಂಬರ್ 28ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು ಸಭೆ ನಡೆಸಿ, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು.
ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು ಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿದ್ದು, ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂಬಂಧ ನವೆಂಬರ್ 29ರಂದು ಹೊರಡಿಸಿರುವ ಪತ್ರದಲ್ಲಿ, ಜನವರಿ 1ರಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಕುರಿತು ಅಗತ್ಯ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.