SIR ದುರ್ಬಳಕೆಗೆ ರಾಜ್ಯ ಸರಕಾರದ ಕುಮ್ಮಕ್ಕು: ಬಿ.ವೈ. ವಿಜಯೇಂದ್ರ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ಕುಮ್ಮಕ್ಕು ನೀಡುತ್ತಿದೆ. ಬಿಎಲ್‍ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರಂಭವಾಗಿರುವ ಎಸ್‍ಐಆರ್ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು. ರಾಜ್ಯ ಸರಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಧಿಕಾರಿಗಳು ಮನೆ ಮನೆಗೆ ಹೋಗಿ ಎನ್ಯೂಮರೇಷನ್ ಫಾರಂ ನೀಡಬೇಕು. ಆದರೆ ಬಿಎಲ್‍ಒಗಳು ಕಲ್ಯಾಣ ಮಂಟಪ, ಮಸೀದಿಗಳಲ್ಲಿ ಕುಳಿತು ನಮೂನೆಗಳನ್ನು ಹಂಚುತ್ತಿದ್ದಾರೆ ಎಂದು ದೂರಿದರು.
ಬಿಎಲ್‍ಒಗಳನ್ನು ಕೆಲ ಶಾಸಕರು ತಮ್ಮ ಕಚೇರಿಯಲ್ಲಿ ಕೂರಿಸಿಕೊಂಡು ಕೆಲಸ ಮಾಡಿಸುತ್ತಿದ್ದಾರೆ. ಅಧಿಕಾರಿಗಳ ಮೇಳೆ ಶಾಸಕರು ಒತ್ತಡ ಹೇರುತ್ತಿದ್ದಾರೆ. ಇದನ್ನೆಲ್ಲ ಆಯುಕ್ತರ ಗಮನಕ್ಕೆ ತಂದಿದ್ದೇವೆ. ಆದುದರಿಂದ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಬೇಕು. ಕೇಂದ್ರ ಚುನಾವಣಾ ಆಯೋಗದ ಎಸ್‍ಐಆರ್‍ಗೆ ಸಮಾನಾಂತರವಾಗಿ ಜಿಬಿಎ ವ್ಯಾಪ್ತಿಯಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಎಸ್‍ಐಆರ್ ನಡೆಸಲಾಗುತ್ತಿದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಹೇಳಿದರು.