×
Ad

ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ನಿರ್ಮಾಣ: ಸಚಿವ ಭೋಸರಾಜು

Update: 2025-05-19 23:32 IST

ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಸೋಮವಾರ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಉತ್ತಮ ಜಾಗ ಮಂಜೂರು: ಕಮಲಾಪುರದಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ: ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್ ನಾನೋಸೀಮ್ ಡೋಮ್ ತಾರಾಲಯ. ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಭೋಸರಾಜು ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಭೋಸರಾಜು ತಿಳಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‍ನ) ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು, ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News