‘ಸ್ಟಿಂಗ್ ಆಪರೇಷನ್’ ಪ್ರಕರಣ: ಎಸ್ಐಟಿ ರಚನೆ ಮುಖ್ಯಮಂತ್ರಿ ವಿವೇಚನೆಗೆ?
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ನೇತೃತ್ವವಹಿಸಬೇಕೇ? ಅಥವಾ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ನಡೆಸುವ ನಿರ್ಧಾರ ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿವೇಚನೆಗೆ ಬಿಡಲಾಗಿದೆ ಎಂದು ಗೊತ್ತಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ತಮ್ಮ ಸಹೋದ್ಯೋಗಿಗಳ ಅಭಿಪ್ರಾಯಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಪ್ರಕರಣವು ಈಗಾಗಲೇ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ವ್ಯಾಪ್ತಿಯಲ್ಲಿ ತನಿಖೆಯಲ್ಲಿದೆ. ಹೀಗಾಗಿ, ತನಿಖೆಯನ್ನು ಸಿಸಿಬಿಯಲ್ಲೇ ಮುಂದುವರಿಸಬೇಕೇ ಅಥವಾ ಹೆಚ್ಚಿನ ತನಿಖೆಗಾಗಿ ಸಿಐಡಿ ಅಥವಾ ಎಸ್ಐಟಿಗೆ ವರ್ಗಾಯಿಸಬೇಕೇ ಎಂಬ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿವೇಚನೆಗೆ ಬಿಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ತನಿಖೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಸಮಾಜಾಯಿಷಿ ನೀಡಿದರು.