ನನ್ನ ಹಾಗೂ ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲಿ ಸರಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಶನಿವಾರ ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಹಾರ ನೆಪದಲ್ಲಿ ಪರಸ್ಪರ ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.
ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.
ಮಾಧ್ಯಮಗಳ ಸೃಷ್ಠಿ :
ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ :
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.
ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.
ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.