×
Ad

ನಾಳೆ (ನ.17) ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಯಾರಾಗಲಿದ್ದಾರೆ ವಿಪಕ್ಷ ನಾಯಕ..?

Update: 2023-11-16 20:17 IST

ಬೆಂಗಳೂರು, ನ. 16: ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಪ್ರಕ್ರಿಯೆ ಬೆನ್ನಲ್ಲೆ ವಿಧಾನ ಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಸಂಬಂಧ ನಾಳೆ(ನ.17)ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆಂಬ ಕುತೂಹಲ ಸೃಷ್ಟಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಿಢೀರ್ ಬೆಳವಣಿಗೆಯಲ್ಲಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೆ ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.

ನಾಳೆ(ನ.17) ಸಂಜೆ 6 ಗಂಟೆಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ತಪ್ಪದೇ ಭಾಗವಹಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದು, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಪ್ರಕಟಿಸುವ ಸಾಧ್ಯತೆಗಳಿವೆ.

ಡಿಸೆಂಬರ್ 4ರಿಂದ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮೊದಲೇ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಚೊಚ್ಚಲ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ದಿಲ್ಲಿಯಿಂದ ಹೈಕಮಾಂಡ್ ಪ್ರತಿನಿಧಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆಂದು ಹೇಳಲಾಗಿದೆ. ಆದರೆ, ಯಾರನ್ನು ಕಳುಹಿಸಲಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‍ರನ್ನು ಸಮರ್ಥವಾಗಿ ಎದುರಿಸಬಲ್ಲ ವ್ಯಕ್ತಿ ಯಾರು ಎಂಬುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋμï, ಸಂಘಟನಾ ಕಾರ್ಯದರ್ಶಿ ರಾಜೇಶ್, ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದು, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಇನ್ನಿತರ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

ಒಕ್ಕಲಿಗರಿಗೋ..ಲಿಂಗಾಯತರಿಗೋ..: ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯದ ಬಿ.ವೈ. ವಿಜಯೇಂದ್ರಗೆ ನೀಡಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡುವ ಸಾಧ್ಯತೆ ಇದೆ. ಆದರೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕಾಂಕ್ಷಿಗಳಾಗಿದ್ದಾರೆ.

ಈ ಮಧ್ಯೆ ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಮಾಜಿ ಡಿಸಿಎಂಗಳಾದ ಡಾ.ಅಶ್ವತ್ಥ ನಾರಾಯಣ, ಆರ್. ಅಶೋಕ್, ಮಾಜಿ ಸಚಿವ ವಿ.ಸುನಿಲ್ ಕುಮಾರ್ ಸೇರಿ ಹಲವು ಮಂದಿ ಕಣ್ಣಿಟ್ಟಿದ್ದಾರೆ. ಪರಿಷತ್‍ನಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಇದ್ದಾರೆ. ಶಾಸಕರ ಒಲವು, ವರಿಷ್ಠರ ಕೃಪಾಶೀರ್ವಾದ ಯಾರ ಮೇಲಿದೆ ಎಂಬುದರ ಮೇಲೆ ತೀರ್ಮಾನವಾಗಲಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಚಿತ್ತನೆಟ್ಟಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News