ಅಮಿತ್ ಸಿಂಗ್, ಎಚ್.ಎನ್.ಮಿಥುನ್ ಸಹಿತ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯ ಸರಕಾರವು 15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಆದೇಶ ಹೊರಡಿಸಿದ್ದು, ಮಂಗಳೂರಿನ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಅಮಿತ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ(ಕೆಎಸ್‍ಆರ್‍ಪಿ) ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ಹುದ್ದೆಯ ನಿರೀಕ್ಷಣೆಯಲ್ಲಿದ್ದ ಆರ್. ಚೇತನ್ ಅವರನ್ನು ಮಂಗಳೂರಿನ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ಹುದ್ದೆಗೆ ನೇಮಕ ಮಾಡಲಾಗಿದೆ. ಮಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿರುವ ಎಚ್.ಎನ್. ಮಿಥುನ್ ಅವರನ್ನು ಗದಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಪರಾಧ ಮತ್ತು ತಾಂತ್ರಿಕ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಹರಿಶೇಖರ್ ಪಿ. ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ(ಡಿಸಿಆರ್ ಇ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಎಸ್‍ಡಿಆರ್ ಎಫ್‍ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ. ನಂಜುಡಸ್ವಾಮಿ ಅವರನ್ನು ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ದೇವಜ್ಯೋತಿ ರಾಯ್ ಅವರನ್ನು ಬೆಂಗಳೂರಿನ ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿದ್ದ ಬೊರಸೆ ಭೂಷಣ್ ಗುಲಾಬ್ರಾವ್ ಅವರನ್ನು ಹುಬ್ಬಳ್ಳಿ-ಧಾರವಾಡದ ಪೊಲೀಸ್ ಉಪ ಮಹಾನಿರೀಕ್ಷಕ ಮತ್ತು ಪೊಲೀಸ್ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಆದರೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಉಪ ಮಹಾನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರಾಗಿದ್ದ ಶಶಿ ಕುಮಾರ್ ಅವರಿಗೆ ಯಾವುದೇ ಹುದ್ದೆಯನ್ನು ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ.
ಹುದ್ದೆಯ ನಿರೀಕ್ಷಣೆಯಲ್ಲಿದ್ದ ನಿಕಮ್ ಪ್ರಕಾಶ್ ಅಮೃತ್ ಅವರನ್ನು ಬೆಳಗಾವಿಯ ಪೊಲೀಸ್ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಶಿವ ಪ್ರಕಾಶ್ ದೇವರಾಜು ಅವರನ್ನು ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಬೆಂಗಳೂರಿನ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಪದ್ಮಿನಿ ಸಾಹೂ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ರಾಮನಗರದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಶ್ರೀನಿವಾಸ್ ಗೌಡ ಅವರನ್ನು ನಗರ ಅಪರಾಧ ವಿಭಾಗ-1ರ ಉಪ ಪೊಲೀಸ್ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯಪಡೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕುಶಲ್ ಚೌಕ್ಸೆ ಅವರನ್ನು ಬೆಂಗಳೂರು ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿರುವ ಸಾಹಿಲ್ ಬಾಗ್ಲಾ ಅವರನ್ನು ಕೊಪ್ಪಳದ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಗದಗದ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರೋಹನ್ ಜಗದೀಶ್ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ(ರಾಮನಗರ) ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.