ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಹಾಗೂ ಓರ್ವ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸುಷ್ಮಾ ಗೋಡ್ಬೊಲೆ ಅವರನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತೆಯಾಗಿ, ಕೃಷಿ ಇಲಾಖೆಯ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ವಸಂತ ಕುಮಾರ್ ಪಿ. ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಓಂಬುಡ್ಸ್ ಮನ್ ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ, ಹೊಸದಿಲ್ಲಿಯ ಕರ್ನಾಟಕ ಭವನದ ಹೆಚ್ಚುವರಿ ನಿವಾಸಿ ಆಯುಕ್ತೆಯಾಗಿದ್ದ ಆಕೃತಿ ಬನ್ಸಾಲ್ ಅವರನ್ನು ಚಾಮರಾಜನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಐಪಿಎಸ್: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅನನ್ಯಾ ಶ್ರೀವಾಸ್ತವ್ ಅವರನ್ನು ಹೊಸದಿಲ್ಲಿಯ ಕರ್ನಾಟಕ ಭವನದ ಹೆಚ್ಚುವರಿ ನಿವಾಸಿ ಆಯುಕ್ತರಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.