ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.7ರಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಲಾಗುವುದು ಎಂದು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.

ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಸ್ಸಾರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್(ಎಐಟಿಯುಸಿ)ನ ಜ್ಯೋತಿ ಅನಂತಸುಬ್ಬರಾವ್, ಸಾರಿಗೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸರಕಾರದೊಂದಿಗೆ ಹಲವು ಹಂತಗಳಲ್ಲಿ ಚರ್ಚೆ ನಡೆಸಲಾಗಿದೆ. ಕೆಲವು ಬೇಡಿಕೆಗಳ ಈಡೇರಿಕೆಗೆ ಸರಕಾರ ಸ್ಪಂದಿಸಿಲ್ಲ. ಫೆಬ್ರವರಿ 18 ಮತ್ತು ಮೇ 12ರಂದು ನಡೆದ ಸಭೆಗಳಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನಕ್ಕೂ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದರು.

ಸಾರಿಗೆ ನೌಕರರಿಗೆ 2024ರ ಜ.1ರಿಂದ ರಾಜ್ಯ ಸರಕಾರಿ ನೌಕರರಿಗೆ ಅನ್ವಯವಾಗುವ ವೇತನ ಪರಿಷ್ಕರಣೆಯ ಸೌಲಭ್ಯಗಳನ್ನು ಒದಗಿಸಬೇಕು. 2020ರ ಸಾಲಿನ 12 ತಿಂಗಳ ವೇತನ ಹಿಂಬಾಕಿ, ಬಾಕಿ ಇರುವ 1,792 ಕೋಟಿ ರೂ. ಮೊತ್ತವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು. ಮಂಜೂರಾಗಿರುವ 620 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬಾಕಿ ಇರುವ 1,172ಕೋಟಿ ರೂ.ಮೊತ್ತವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.

ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ವಾರದ ರಜೆ ಮತ್ತು ಇತರೆ ರಜಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕು. ನಿಗದಿತ ಸಮಯಕ್ಕೆ ಕರ್ತವ್ಯ ನಿರ್ವಹಿಸಲು ಹಾಗೂ ವಿಶ್ರಾಂತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಬಾಕಿ ಇರುವ ಪಿಎಫ್, ಗ್ರಾಚ್ಯುಟಿ, ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಸರಕಾರಿ ಸಾರಿಗೆ ನಿಗಮಗಳಿಗೆ ಪಾವತಿಸಬೇಕಾದ ಶಕ್ತಿ ಯೋಜನೆಯ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಿ ನಿಗಮಗಳಿಗೆ ಆರ್ಥಿಕ ನೆರವು ನೀಡಬೇಕು. ಸರಕಾರ ನೀಡಿರುವ ಭರವಸೆಗಳ ಅನುಷ್ಠಾನವನ್ನು ಜಂಟಿ ಕ್ರಿಯಾ ಸಮಿತಿ ನಿರಂತರವಾಗಿ ಗಮನಿಸುತ್ತಿದ್ದು, ಬೇಡಿಕೆಗಳ ಈಡೇರಿಕೆಯಲ್ಲಿ ವಿಳಂಬವಾದರೆ ಮುಂದಿನ ಹೋರಾಟದ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿಯ ಬಿ. ಜಯದೇವರಾಜೇ ಅರಸು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್(ಸಿಐಟಿಯು)ನ ಎಚ್.ಡಿ.ರೇವಪ್ಪ, ವಿಶ್ವ ಕಾರ್ಮಿಕರ ಕೂಟ ಸಾರಿಗೆ ನಿಗಮದ ಗಂಡಸಿ ಸದಾನಂದ ಸ್ವಾಮಿ ಹಾಗೂ ಚಂದ್ರೇಗೌಡ ಮತ್ತಿತರರು ಹಾಜರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor