×
Ad

ಯುಜಿಸಿಇಟಿ: ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ

Update: 2025-08-30 20:58 IST

ಬೆಂಗಳೂರು, ಆ.30: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಎರಡನೆ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶ ಹೊರಬಿದ್ದ ನಂತರ ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಈ ಕೋರ್ಸ್‍ಗಳಿಗೆ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಸ್ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಯುಜಿಸಿಇಟಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಅವರಿಗೆ ಅನುಕೂಲ ಆಗಲಿ ಎನ್ನುವ ಕಾರಣಕ್ಕೆ ನಾಲ್ಕು ಛಾಯ್ಸ್‌ ಗಳ ಆಯ್ಕೆಗೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‍ಗಳನ್ನು ಹೊರತುಪಡಿಸಿ, ಇತರ ಎಲ್ಲ ಕೋರ್ಸ್‍ಗಳ ಪ್ರವೇಶ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದ್ದು, ಛಾಯ್ಸ್ ಆಯ್ಕೆಗೂ ಚಾಲನೆ ನೀಡಲಾಗಿದೆ. ಛಾಯ್ಸ್-1 ಮತ್ತು ಛಾಯ್ಸ್- 2ಅನ್ನು ಆಯ್ಕೆ ಮಾಡಿದವರಿಗೆ ಶುಲ್ಕ ಪಾವತಿಸಲು ಸೆ.2ರವರೆಗೆ ಅವಕಾಶ ನೀಡಲಾಗಿದೆ. ಸೆ.3ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರವೇಶ ಪ್ರಕ್ರಿಯೆಗೆ ಹೆಚ್ಚಿನ ಸಮಯ ಇಲ್ಲದ ಕಾರಣ ವೃತ್ತಿಪರ ಕಾಲೇಜುಗಳು ರವಿವಾರ ಸೇರಿದಂತೆ ಎಲ್ಲ ಸಾರ್ವತ್ರಿಕ ರಜಾ ದಿನಗಳಂದು ಕಾರ್ಯನಿರ್ವಹಿಸಬೇಕೆಂದು ಅವರು ಸೂಚಿಸಿದ್ದಾರೆ.

ವೈದ್ಯಕೀಯ ಕೌನ್ಸೆಲಿಂಗ್: ಎಂಸಿಸಿ ಫಲಿತಾಂಶ ಪ್ರಕಟಿಸಿದ ನಂತರ ರಾಜ್ಯದಲ್ಲಿ ಸೀಟು ಸಿಕ್ಕಿರುವ ಕೆಲವರಿಗೆ ಅಲ್ಲಿಯೂ ಸೀಟು ಹಂಚಿಕೆಯಾಗಿರುವ ಮಾಹಿತಿ ಲಭ್ಯವಾಗಲಿದೆ. ಅಂತಹ ಕೆಲವರು ಹೊರ ಹೋಗುವುದಕ್ಕೂ ಅವಕಾಶ ನೀಡಲಾಗುತ್ತದೆ. ಅಲ್ಲದೆ, ಹೊಸ ಸೀಟು ಸೇರ್ಪಡೆಯಾಗುವ ಸಾಧ್ಯತೆ ಬಗ್ಗೆ ಎಂಸಿಸಿ ಹೇಳುತ್ತಿದೆ. ಒಂದು ವೇಳೆ ಈ ರೀತಿ ಆದರೆ, ಹೆಚ್ಚುವರಿ ಸೀಟುಗಳನ್ನೂ ಇದೇ ಸುತ್ತಿಗೆ ಗಣನೆಗೆ ತೆಗೆದುಕೊಂಡು, ಪುನಃ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಇದರಿಂದ ಹಾಲಿ ಸಿಕ್ಕಿರುವ ಸೀಟಿಗಿಂತ ಮತ್ತಷ್ಟು ಉತ್ತಮದ್ದೇ ಸೀಟು ಸಿಗುವ ಸಾಧ್ಯತೆ ಇರುತ್ತದೆ ಎಂದು ಪ್ರಸನ್ನ ಅವರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News