ಕೋಲಾರ, : ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ರಾರಾಜಿಸಬೇಕಾದ ಸಂದರ್ಭದಲ್ಲಿ ಉರ್ದು ಹಬ್ಬ ಆಚರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಒಡೆದು ಆಳುವ ರಾಜಕಾರಣಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಕೋಲಾರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರವನ್ನು ಮುಂದಿಟ್ಟಾಗ, ಮಕ್ಕಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ಜನರನ್ನು ದಿಕ್ಕುತಪ್ಪಿಸಿತು. ಆದರೆ ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡದ ಸ್ಥಾನದಲ್ಲಿ ಉರ್ದು ಹಬ್ಬ ಆಚರಿಸುವ ಮೂಲಕ ಸರ್ಕಾರ ತನ್ನ ನಿಲುವನ್ನು ತಾನೇ ಬಹಿರಂಗಪಡಿಸಿದೆ ಎಂದು ಹೇಳಿದರು.

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಎಲ್ಲರಿಗೂ ಸಮಾನ ಅವಕಾಶ ಎಂಬ ದೃಷ್ಟಿಕೋನದಲ್ಲಿ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರಿಗೆ ಯೋಜನೆಗಳನ್ನು ನೀಡುವುದರ ಜೊತೆಗೆ ಹಿಂದೂಗಳು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗಕ್ಕೂ ಸಮಾನವಾಗಿ ಅಭಿವೃದ್ಧಿ ಯೋಜನೆಗಳನ್ನು ತಲುಪಿಸಬೇಕು ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುವ ಬದಲು ಸಮಾಜವನ್ನು ವಿಭಜಿಸುವ ರೀತಿಯಲ್ಲಿ ರಾಜಕೀಯ ಮಾಡಿದರೆ, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ತಮ್ಮ ತೀರ್ಪಿನ ಮೂಲಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಎಸ್‌ಐಆರ್‌ ಪ್ರಕ್ರಿಯೆ ಆರಂಭವಾದ ಸಂದರ್ಭದಲ್ಲಿ ಕೆಲವು ಕಡೆಗಳಲ್ಲಿ ಮಸೀದಿಗಳು ಮತ್ತು ಕಲ್ಯಾಣ ಮಂಟಪಗಳಲ್ಲಿ ಮುಸ್ಲಿಂ ಮತದಾರರನ್ನು ಒಟ್ಟುಗೂಡಿಸಿ, ಅಧಿಕಾರಿಗಳನ್ನು ಅಲ್ಲಿಯೇ ಕೂರಿಸಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರಿಸುವ ಕೆಲಸ ನಡೆದಿದೆ ಎಂಬ ಆರೋಪಗಳಿವೆ. ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಇಂತಹ ಅಕ್ರಮಗಳ ಕುರಿತು ಬಿಜೆಪಿ ಕಾರ್ಯಕರ್ತರು ಹಾಗೂ ಇತರ ಪಕ್ಷಗಳವರು ಚುನಾವಣಾ ಆಯೋಗದ ಗಮನಕ್ಕೆ ತರುತ್ತಿದ್ದಾರೆ ಎಂದು ಹೇಳಿದರು.

ಅಕ್ರಮವಾಗಿ ಸೇರಿಸಲಾಗಿದೆ ಎಂದು ಅನುಮಾನವಿರುವ ಹೆಸರುಗಳನ್ನು ಪರಿಶೀಲಿಸಿ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಹೆಸರು ಸರಿಯಾಗಿದ್ದರೆ ಚುನಾವಣಾ ಆಯೋಗ ಅದನ್ನು ಉಳಿಸುತ್ತದೆ; ಅಕ್ರಮವಾಗಿದ್ದರೆ ಕೈಬಿಡುತ್ತದೆ. ಅಂತಿಮವಾಗಿ ನಿರ್ಧಾರ ಕೈಗೊಳ್ಳಬೇಕಾದದ್ದು ಚುನಾವಣಾ ಆಯೋಗವೇ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹೆಸರುಗಳು ಮತದಾರರ ಪಟ್ಟಿಗೆ ಸೇರ್ಪಡೆಯಾಗಿವೆ ಎಂಬ ದೂರುಗಳೂ ಬಂದಿವೆ. ಇಂತಹ ಆರೋಪಗಳನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗದ ಗಮನಕ್ಕೆ ತರುವುದರಲ್ಲಿ ಯಾವುದೇ ಅಪರಾಧವಿಲ್ಲ. ಈ ವಿಚಾರದಲ್ಲಿ ತನ್ನ ವಿರುದ್ಧ ಯಾವುದೇ ಎಫ್‌ಐಆರ್ ಅಥವಾ ಬೆದರಿಕೆ ಬಂದರೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದರು.

ಕೆಪಿಎಸ್‌ಸಿ ಅಕ್ರಮಗಳಿಗೆ ಇತಿಶ್ರೀ ಹಾಡಬೇಕು: ವಿಜಯೇಂದ್ರ

ಬಂಗಾರಪೇಟೆಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಕೆಪಿಎಸ್‌ಸಿಯಲ್ಲಿ ಹಲವು ವರ್ಷಗಳಿಂದ ನಡೆಯುತ್ತಿರುವ ಅಕ್ರಮಗಳಿಗೆ ರಾಜ್ಯ ಸರ್ಕಾರ ಇತಿಶ್ರೀ ಹಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಉದ್ಯೋಗ ಪಡೆಯುವ ಕನಸಿನಿಂದ ಯುವಕರು ವರ್ಷಗಟ್ಟಲೆ ಕಷ್ಟಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು ಮತ್ತು ಗೊಂದಲಗಳಿಂದ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಕೆಪಿಎಸ್‌ಸಿಯನ್ನು ಮುಚ್ಚುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಬದಲಾಗಿ, ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು. ಯುವಜನರು ವರ್ಷಗಟ್ಟಲೆ ಮಾಡಿದ ಶ್ರಮಕ್ಕೆ ನ್ಯಾಯ ದೊರೆಯುವಂತಹ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ನಿರ್ಮಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor